ಮೈಸೂರು, (ಸೆ.21); ದಸರಾ ನಾಡಹಬ್ಬಕ್ಕೆ ಮೈಸೂರಿಗೆ ಆಗಮಿಸಿರುವ ಗಜಪಡೆಯೊಂದಿಗೆ ಬಂದಿರುವ ಮಾವುತರು ಹಾಗೂ ಕಾವಾಡಿಗಳ ಕುಟುಂಬದವರಿಗೆ ಇಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಇಲ್ಲಿನ ಅರಮನೆ ಆವರಣದಲ್ಲಿ ಶನಿವಾರ ಉಪಾಹಾರ ಬಡಿಸಿ, ಅವರೊಂದಿಗೆ ತಾವೂ ಸೇವಿಸಿದರು.
ಅರಮನೆ ಮಂಡಳಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೂಡ ಉಪಾಹಾರ ಸೇವಿಸಿದರು.
ಬಳಿಕ ಮಾವುತರು ಹಾಗೂ ಕಾವಾಡಿಗಳ ಮಕ್ಕಳಿಗೆ ತಾತ್ಕಾಲಿಕವಾಗಿ ತೆರೆದಿರುವ ಟೆಂಟ್ ಶಾಲೆಗೆ ಚಾಲನೆ ನೀಡಿದರು. ಇದೇ ವೇಳೆ ಮಕ್ಕಳು ಪ್ರಸ್ತುತಪಡಿಸಿದ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿ, ಅವರೊಂದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.
ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿ ಗಜಪಡೆಯ ಪಾಲನೆ, ಪೋಷಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಾವಾಡಿಗಳು ಹಾಗೂ ಮಾವುತರ ಕಾರ್ಯವನ್ನು ಪ್ರಶಂಸಿಸಿ ಅವರ ಯೋಗಕ್ಷೇಮ ವಿಚಾರಿಸಿದರು.
ಅರಮನೆ ಆವರಣದಲ್ಲಿ ತೆರೆಯಲಾಗಿರುವ ತಾತ್ಕಾಲಿಕ ಆರೋಗ್ಯ ತಪಾಸಣೆ ಕೇಂದ್ರವನ್ನು ವೀಕ್ಷಿಸಿ, ಗಜಪಡೆಯೊಂದಿಗೆ ಬಂದಿರುವವರನ್ನು ಕಾಲಕಾಲಕ್ಕೆ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲೆಯ ಶಾಸಕರಾದ ತನ್ವೀರ್ ಸೇಠ್, ಜಿ.ಟಿ ದೇವೇಗೌಡ ಹಾಗೂ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಜಿಲ್ಲೆಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.