ದೊಡ್ಡಬಳ್ಳಾಪುರ: ಇಡೀ ವಿಶ್ವದಲ್ಲಿ ರಕ್ತದಾನದ ಮಹತ್ವ ಕುರಿತು ಹಿಂದಿಗಿಂತಲು ಇಂದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ವೇಗದ ಸಾರಿಗೆ ಸಂಪರ್ಕದ ಬದುಕಿನಲ್ಲಿ ನಡೆಯುತ್ತಿರುವ ಅಪಘಾತದ ಸಂದರ್ಭಗಳಲ್ಲಿ ರಕ್ತದ ಕೊರತೆಯಿಂದಲೇ ಹೆಚ್ಚಿನ ಸಾವುಗಳು ಸಂಭವಿಸುತ್ತಿವೆ ಎಂದು ಆತ್ರೇಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ರಘುನಾಥ್ ಹೇಳಿದರು.
ತಾಲ್ಲೂಕಿನ ಕೊಡಿಗೇಹಳ್ಳಿ ಗ್ರಾಮದಲ್ಲಿನ ಆತ್ರೇಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ,ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿವಿಧ ಆರೋಗ್ಯದ ಸಮಸ್ಯೆಗಳಿಂದ ಮೃತಪಡುವವರ ಸಂಖ್ಯೆಗಿಂತಲು ಅಪಘಾತಗಳಲ್ಲಿ ಮೃತಪಡುವವರ ಸಂಖ್ಯೆಯೇ ಹೆಚ್ಚಾಗುತ್ತಿದೆ. ಸಕಾಲದಲ್ಲಿ ರಕ್ತ ದೊರೆಯದೇ ಸಾವನ ಸಂಖ್ಯೆ ಹೆಚ್ಚಾಗಲು ಕಾರಣವಾಗುತ್ತಿದೆ. ಮಾರಣಾಂತಿಕ ರೋಗ ಇಲ್ಲದ ಪ್ರತಿಯೊಬ್ಬರು ಸಹ ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ಯಾವುದೇ ಕೆಟ್ಟಪರಿಣಾಮ ಬೀರುವುದಿಲ್ಲ. ಒಬ್ಬ ರಕ್ತದಾನಿಯಂದ ಹಲವಾರು ಜನರ ಪ್ರಾಣ ಉಳಿಯಲಿದೆ. ರಕ್ತದಾನದಲ್ಲಿ ವಿದ್ಯಾವಂತ ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಎಂ.ಸಿ.ಸುನಿಲ್ ಕುಮಾರ್, ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ಎಸ್.ನಾಗೇಶ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶಾರದನಾಗನಾಥ್, ಆತ್ರೇಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಮುಖ್ಯಸ್ಥ ಡಾ.ಲಾಡ್, ಸಿಬ್ಬಂದಿ ಯುವರಾಜ್ ಇದ್ದರು.
ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ದಾನಿಗಳಾದ ಕನಸವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಇಂದಿರಾ, ಜಯಶಂಕರ್, ಕಿರಣ್ ಇವರನ್ನು ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ ವತಿಯಿಂದ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ 45 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.