ಮೈಸೂರು: ಚಾಮುಂಡೇಶ್ವರಿ ತಾಯಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿಗೆ ಚಾಲನೆ ನೀಡಿದ್ದಾರೆ.
ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ, ಸಚಿವ ಶಿವರಾಜ್ ತಂಗಡಗಿ, ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಪಸ್ಥಿತರಿದ್ದರು.

750 ಕೆ.ಜಿ.ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ಚಾಮುಂಡೇಶ್ವರಿ ತಾಯಿಯನ್ನು ಹೊತ್ತ ಕ್ಯಾಪ್ಟನ್ ಅಭಿಮನ್ಯು ಜೊತೆಗೆ ಗಜಪಡೆ ಅರಮನೆಯಿಂದ ಬನ್ನಿಮಂಟಪದವರೆಗೆ ಸುಮಾರು 5 ಕಿಮೀಗೂ ಹೆಚ್ಚು ದೂರ ಸಾಗುತ್ತಿದ್ದಾನೆ.
ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ದೇಶ- ವಿದೇಶ ಮತ್ತು ನೆರೆಹೊರೆಯ ಜಿಲ್ಲೆಯ ಲಕ್ಷಾಂತರ ಮಂದಿ ರಾಜ ಬೀದಿಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ.

ಇದಕ್ಕೂ ಮುನ್ನ ನಾಡಿನ ಕಲೆ, ಸಂಸ್ಕೃತಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಸಾರುವ ಸುಮಾರು 51 ಸ್ತಬ್ಧಚಿತ್ರಗಳು ಹಾಗೂ ಕಲಾ ತಂಡಗಳ ಮೆರವಣಿಗೆ ನಡೆಯಿತು.