ಬೆಂಗಳೂರು: ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆಂದು ಘೋಷಿಸಿದ್ದರು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ಮೂಲಕ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ.
ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಸಿ.ಪಿ.ಯೋಗೀಶ್ವರ್ ಭೇಟಿಯಾಗಿ ಮಾತುಕತೆ ನಡೆಸಿದರು.

ಈ ವೇಳೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪೊನ್ನಣ್ಣ, ಮಾಜಿ ಸಂಸದ ಡಿಕೆ ಸುರೇಶ್ ಇದ್ದರು.
ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್ಡಿಎ ಟಿಕೆಟ್ ಸಿಗಬಹುದು ಎಂದು ನಿನ್ನೆ ಪೂರ್ತಿ ಕಾದು ಕುಳಿತ್ತಿದ್ದರು. ಆದರೆ, ಇಂದು ಸಿಎಂ ಭೇಟಿ ಮಾಡುವ ಮೂಲಕ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ.
ಇದೀಗ ಬಂದ ಮಾಹಿತಿ ಅನ್ವಯ ಬಿಜೆಪಿಗೆ ಯೋಗೇಶ್ವರ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ವಾಟ್ಸಪ್ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆಂದು ವರದಿಯಾಗಿದೆ.