
ಹಾವೇರಿ: ನಮ್ಮ ತಾಯಿಯವರ ಸೂಚನೆಯಂತೆ ಒಳ್ಳೆಯ ಮುಹೂರ್ತದಲ್ಲಿ ಇಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾವಿಯಲ್ಲಿಂದು ನಾಮಪತ್ರ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಂದೆ ತಾಯಿಯವರ ಆಶೀರ್ವಾದ, ಹಿರಿಯರ ಆಶೀರ್ವಾದ, ಪಕ್ಷದ ವರಿಷ್ಠರ ಆಶೀರ್ವಾದದಿಂದ ನಾನು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ನಾಳೆ ಬಹಿರಂಗವಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ನಾಳೆ ಪಕ್ಷದ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಈ ಚುನಾವಣೆಯಲ್ಲಿ ಜನರ ಬಳಿ ಏನೇಂದು ಮನವಿ ಮಾಡುತ್ತೀರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದುವರೆಗೂ ನಮ್ಮ ತಂದೆ ಬಸವರಾಜ ಬೊಮ್ಮಾಯಿಯವರಿಗೆ ಆಶೀರ್ವಾದ ಮಾಡುತ್ತಿದ್ದಿರಿ, ಈಗ ನನಗೆ ಆಶೀರ್ವಾದ ಮಾಡಿ ಎಂದು ಜನರಲ್ಲಿ ಮನವಿ ಮಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ನಾನು ಬಡವರು, ಯುವಕರು, ಮಹಿಳೆಯರ ಪರವಾಗಿ ಕೆಲಸ ಮಾಡುತ್ತೇನೆ.
ಚುನಾವಣೆಯಲ್ಲಿ ಜಯ ಗಳಿಸಿದರೆ ಅನೇಕ ಯೋಜನೆಗಳನ್ನು ಜಾರಿಗೊಳಿಸುವ ಕುರಿತು ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ಹೇಳಿದರು.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						