ದೊಡ್ಡಬಳ್ಳಾಪುರ: ಮೈಸೂರಿನ ದಿವಾನರಾಗಿದ್ದ ಸರ್ ಮಿರ್ಜಾ ಇಸ್ಮಾಯಿಲ್ ಅವರು ದೊಡ್ಡಬಳ್ಳಾಪುರದ ಸಮಗ್ರ ಅಭಿವೃದ್ದಿಗೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.
ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶ್ರೀಲಕ್ಷ್ಮಿ ಲಲಿತ ನಾಟ್ಯ ಕಲಾ ಕೇಂದ್ರದಲ್ಲಿ ನಡೆದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ದೊಡ್ಡಬಳ್ಳಾಪುರದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ಮಿರ್ಜಾ ಇಸ್ಮಾಯಿಲ್ ಅವರಿಗೆ ಬಹಳ ಪ್ರೀತಿಪಾತ್ರರಾಗಿದ್ದರು. ಮಿರ್ಜಾ ಇಸ್ಮಾಯಿಲ್ ಅವರು ದಿವಾನರಾಗಿದ್ದ ಕಾಲದಲ್ಲೇ ದೊಡ್ಡಬಳ್ಳಾಪುರಕ್ಕೆ ವಿದ್ಯುತ್, ಕುಡಿಯುವ ನೀರಿನ ಸೌಲಭ್ಯ,ಮುನಿಪಲ್ ಹೈಸ್ಕೂಲ್, ಹೆರಿಗೆ ಆಸ್ಪತ್ರೆ, ಪಶುವೈದ್ಯ ಆಸ್ಪತ್ರೆ ಮುಂತಾದ ಮೂಲಭೂತ ಸೌಲಭ್ಯಗಳನ್ನು ಮತ್ತು ಅಭಿವೃದ್ಧಿ ಯೋಜನೆಗಳನ್ನು ಸಕಾರಗೊಳಿದರು ಎಂದರು.
ದಿವಾನ್ ಸರ್ ಮಿರ್ಜಾ ಇಸ್ಮಾಯಿಲ್ ಅವರು ದೂರದೃಷ್ಟಿಯ ಆಡಳಿತಗಾರರು, ತಮ್ಮ ಅಧಿಕಾರದ ಅವಧಿಯಲ್ಲಿ ಮೈಸೂರು ರಾಜ್ಯದಲ್ಲಿ ಕೈಗಾರಿಕೆ, ನೀರಾವರಿ, ಶಿಕ್ಷಣ, ವಸತಿ ನಿಲಯಗಳು, ಹಳ್ಳಿಗಳಿಗೆ ವಿದ್ಯುತ್ ಸೌಲಭ್ಯ ರಸ್ತೆಗಳ ನಿರ್ಮಾಣ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಿದರು. ಮೈಸೂರು ಕೃಷ್ಣರಾಜಸಾಗರದಲ್ಲಿ ಉದ್ಯಾನವನವನ್ನು ನಿರ್ಮಿಸಿ ವಿಶ್ವಖ್ಯಾತಿಗೊಳಿಸಿದರು ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ,
ಕನ್ನಡ ಸಾಹಿತ್ಯ ಪರಿಷತ್ತಿನ ಸಮಗ್ರ ಅಭಿವೃದ್ಧಿಗೆ ಸರ್ ಮಿರ್ಜಾ ಇಸ್ಮಾಯಿಲ್‍ರವರ ಕೊಡುಗೆ ಅಪಾರವಾಗಿದೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್ ಎಂ ವಿಶ್ವೇಶ್ವರಯ್ಯ ನವರಿಂದ ಸ್ಥಾಪಿಸಲ್ಪಟ್ಟಂತಹ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾಗಿದೆ. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕಟ್ಟಡದ ನಿವೇಶನವನ್ನು ನೀಡಿ ಬೃಹತ್ ಮಂದಿರವನ್ನು ನಿರ್ಮಾಣ ಮಾಡಲು ಸರ್ ಮಿರ್ಜಾ ಇಸ್ಮಾಯಿಲ್ ಸಂಪೂರ್ಣ ಸಹಕಾರ ನೀಡಿದರು ಎಂದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಸಫೀರ್, ದೇವಾಂಗ ಮಂಡಳಿ ನಿರ್ದೇಶಕ ಕೆ.ಎಸ್.ಮಂಜುನಾಥ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ್ತ ಆಯುಕ್ತ ವೆಂಕಟರಾಜು, ಶ್ರೀ ಲಕ್ಷ್ಮೀ ಲಲಿತ ನಾಟ್ಯ ಕಲಾ ಸಂಘದ ಅಧ್ಯಕ್ಷ ಗುರುಪ್ರಸಾದ್, ಕಾರ್ಯದರ್ಶಿ ಕವಿತಾ, ನೃತ್ಯ ತರಬೇತಿಗಾರ್ತಿ ತೇಜಸ್ವಿನಿ, ಪತ್ರಕರ್ತ ಕೃಷ್ಣಪ್ರಸಾದ್, ಲಕ್ಷ್ಮೀನಾರಾಯಣ ಮತ್ತು ಶ್ರೀ ಲಕ್ಷ್ಮೀ ಲಲಿತ ನಾಟ್ಯ ಕಲಾ ಸಂಘದ ವಿದ್ಯಾರ್ಥಿಗಳು ಭಾಗವಹಿಸಿದ್ದರು.