ವಿಜಯನಗರ: ಚಾಮರಾಜಪೇಟೆಯಲ್ಲಿ ದನಗಳಿಗೆ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah), ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಪ್ರತಿಭಟನೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ. ಪೊಲೀಸ್ ಆಯುಕ್ತರು ತಪ್ಪಿತಸ್ಥರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ.
ಇದನ್ನೂ ಓದಿ: Chakravarti Sulibele: ಹಿಂದೂ-ಮುಸ್ಲಿಂ ನಡುವೆ ದಂಗೆ ಹುಟ್ಟುಹಾಕಲು ಕೆಲವರಿಂದ ಪ್ರಯತ್ನ: ಚಕ್ರವರ್ತಿ ಸೂಲಿಬೆಲೆ
ಈ ಘಟನೆ ಕಾರಣವಾದವರ ಮಾಹಿತಿ ತಿಳಿದು ಬಂದಿಲ್ಲ. ಆದಾಗ್ಯೂ ಈ ಕುರಿತು ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಜಾತಿಗಣತಿ ವರದಿ ಜಾರಿ- ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
ಜಾತಿಗಣತಿ ವರದಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಗಣತಿ ವರದಿಗಳ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ಸಿದ್ದಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದರು.
ರಾಜ್ಯದಾದ್ಯಂತ ಕರಾಳ ಸಂಕ್ರಾಂತಿ: ಆರ್ ಅಶೋಕ ಎಚ್ಚರಿಕೆ
ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ವಹಿಸದಿದ್ದರೆ, ರಾಜ್ಯದಾದ್ಯಂತ ಕರಾಳ ಸಂಕ್ರಾಂತಿ ಆಚರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು.
ಚಾಮರಾಜಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶ ಗೋವನ್ನು ಪವಿತ್ರ ಎಂದು ಪರಿಗಣಿಸಿದೆ. ಸಂಕ್ರಾಂತಿ ಹಬ್ಬದಲ್ಲೂ ಗೋವನ್ನು ಪೂಜಿಸಲಾಗುತ್ತದೆ.
ಕಾಂಗ್ರೆಸ್ ಸರ್ಕಾರ ಹೊಸ ವರ್ಷಕ್ಕೆ ಬೆಲೆ ಏರಿಕೆಯ ಕೊಡುಗೆ ನೀಡಿದೆ. ಅದೇ ರೀತಿ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಸುವಿನ ಕೆಚ್ಚಲು ಕೊಯ್ದುಹಾಕುವ ಕೊಡುಗೆಯನ್ನು ನೀಡಿದೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಾನು ಈವರೆಗೆ ನೋಡಿಲ್ಲ ಎಂದರು.
ನೂರಾರು ವರ್ಷಗಳಿಂದ ಚಾಮರಾಜಪೇಟೆಯಲ್ಲಿ ಪಶು ಆಸ್ಪತ್ರೆ ಇದೆ. ಈ ಭೂಮಿಯನ್ನು ವಕ್ಫ್ ಮಂಡಳಿಗೆ ಸೇರಿಸಲು ಪ್ರಯತ್ನ ನಡೆದಿತ್ತು. ಆಗ ಸರ್ಕಾರದ ವಿರುದ್ಧ ಪ್ರತಿಭಟಿಸುವುದರ ಜೊತೆಗೆ, ಕೋರ್ಟ್ ಮೊರೆ ಹೋಗಲಾಯಿತು.
ಪ್ರತಿಭಟನೆಯ ಸಮಯದಲ್ಲಿ ಇವೇ ಹಸುಗಳನ್ನು ತೋರಿಸಲಾಗಿತ್ತು. ಅದಕ್ಕಾಗಿಯೇ ಮಚ್ಚು, ಡ್ರ್ಯಾಗರ್ ಬಳಸಿ ಹಸುಗಳ ಕೆಚ್ಚಲು ಕೊಯ್ದು, ಕಾಲು ಕತ್ತರಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಾಯಕರು ಮತಕ್ಕಾಗಿ ದೇವಸ್ಥಾನಕ್ಕೆ ಹೋಗುತ್ತಾರೆ. ಆದರೆ ಯಾರಿಗೂ ಹಿಂದೂ ಧರ್ಮದ ಬಗ್ಗೆ ಶ್ರದ್ಧೆ ಇಲ್ಲ. ಹಿಂದೂಗಳಲ್ಲಿ ಭೀತಿ ಹುಟ್ಟಿಸಲು ಜಿಹಾದಿಗಳು ಹೀಗೆ ಮಾಡಿದ್ದರೂ ಕಾಂಗ್ರೆಸ್ ನಾಯಕರು ಇದನ್ನು ಖಂಡಿಸುವುದಿಲ್ಲ. ಈಗ ಯಾವ ಮುಖ ಇಟ್ಟುಕೊಂಡು ಸಂಕ್ರಾಂತಿ ಆಚರಣೆ ಮಾಡುತ್ತಾರೆ? ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಕರಾಳ ಸಂಕ್ರಾಂತಿ ಆಚರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಈ ಭಾಗದಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದರೆ ಅದನ್ನು ಕಿತ್ತುಕೊಂಡು ಹೋಗುತ್ತಾರೆ. ಈಗ ಆ ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ಬೆದರಿಕೆ ಹಾಕುವ ಕೆಲಸ ಮಾಡಿದ್ದಾರೆ.
ಎಸಿಪಿ ಜೊತೆ ಮಾತಾಡಿದ್ದು, ತಕ್ಷಣ ಕ್ರಮ ವಹಿಸುವಂತೆ ಸೂಚಿಸಿದ್ದೇನೆ. ಇಲ್ಲವಾದರೆ ತೀವ್ರವಾದ ಪ್ರತಿಭಟನೆ ಮಾಡುತ್ತೇವೆ. ಕಾಂಗ್ರೆಸ್ ಸಚಿವರು, ಮುಖ್ಯಮಂತ್ರಿ ಈ ಕಡೆ ತಿರುಗಿಯೂ ನೋಡಲ್ಲ ಎಂದರು.