ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಶಾಲೆಯಲ್ಲಿ (Govt School) ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ತಿನ್ನದ ಮಕ್ಕಳಿಗೆ ನೀಡಲಾಗುತ್ತಿದ್ದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಸರಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಕೊಬ್ಬಿನಾಂಶ ಮತ್ತು ಸಕ್ಕರೆ ಅಂಶ ಅಧಿಕವಾಗಿದೆ.
ಅಲ್ಲದೇ ಇದನ್ನು ಸಮರ್ಪಕವಾಗಿ ಸಂಗ್ರಹಿಸದೇ ಇರುವುದು ಹಾಗೂ ಅವಧಿ ಮೀರಿದ ಚಿಕ್ಕಿಗಳನ್ನು ಮಕ್ಕಳಿಗೆ ನೀಡುತ್ತಿರುವ ಆರೋಪ ವ್ಯಕ್ತವಾಗಿದೆ.
ಚಿಕ್ಕಿ ತಿಂದು ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾದ ಹಿನ್ನಲೆ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.
ಮಕ್ಕಳಿಗೆ ಚಿಕ್ಕಿಯ ಬದಲಾಗಿ ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣನ್ನು ನೀಡಲು ಇಲಾಖೆ ಮುಂದಾಗಿದೆ ಎಂದು ವರದಿಯಾಗಿದೆ.