ದೊಡ್ಡಬಳ್ಳಾಪುರ: ಪ್ರೊ.ಜಿ.ಎಸ್. ಸಿದ್ದಲಿಂಗಯ್ಯ (Prof.G.S.Siddalingaiah) ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಪರಿಷತ್ತು ಸರ್ವತೋಮುಖ ಬೆಳವಣಿಗೆ ಆಯಿತು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರ ಆವರಣದಲ್ಲಿ ನಡೆದ ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಅವರು ಕಸಾಪ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಪರಿಷತ್ತು ಧ್ವಜ ರೂಪಗೊಂಡಿತು. ನಾಡಗೀತೆ ಹಾಡುವ ಅವಧಿಗೆ ಬಗ್ಗೆ ಹೆಚ್ಚು ಮಾಡಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಪುಸ್ತಕ ಪ್ರಕಟಣೆ ಯಶಸ್ವಿಯಾಗಿ ನಡೆದವು ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ, ತುಮಕೂರು ಜಿಲ್ಲೆಯ ಬೆಳ್ಳಾವೆಯಲ್ಲಿ ಜನಿಸಿದ ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಅವರು ಕನ್ನಡದ ಪ್ರಾಧ್ಯಾಪಕರಾಗಿ, ಕಾಲೇಜು ಪ್ರಾಂಶುಪಾಲರಾಗಿ, ಕಾಲೇಜು ಶಿಕ್ಷಣ ಇಲಾಖೆಯಲ್ಲಿ ನಿರ್ದೇಶಕರಾಗಿ, ಹಂಪಿ ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು. ಬೆಂಗಳೂರು, ಮೈಸೂರು, ಕರ್ನಾಟಕ, ಕಲಬುರಗಿ ಮತ್ತು ಮಂಗಳೂರು ವಿಶ್ವವಿದ್ಯಾಲಯಗಳ ಅಕಾಡೆಮಿಕ್ ಕೌನ್ಸಿಲ್, ಸೆನೆಟ್ ಮತ್ತು ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದರು ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ, ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಅವರು ಕವಿ, ವಿಮರ್ಶಕ, ಸಂಶೋಧಕ, ಅನುವಾದಕರಾಗಿ ಹಲವಾರು ಅಮೂಲ್ಯ ಕೃತಿಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ. ಅವರ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ, ಕಾವ್ಯಾನಂದ ಪ್ರಶಸ್ತಿ, ವಚನ ಸಾಹಿತ್ಯಶ್ರೀ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಬಸವಶ್ರೀ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಪ್ರತಿನಿಧಿ ನಾಗರತ್ನಮ್ಮ, ಸಾಮಾಜಿಕ ಕಾರ್ಯಕರ್ತ ಕೃಷ್ಣಪ್ರಸಾದ್, ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ಇಸ್ತೂರು ಕೋದಂಡರಾಮ ಭಜನಾ ಮಂಡಲಿ ಕಾರ್ಯದರ್ಶಿ ರಂಗಸ್ವಾಮಯ್ಯ, ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ, ಸಹಶಿಕ್ಷಕರುಗಳಾದ ಕೋದಂಡರಾಮ್, ತಿಮ್ಮಯ್ಯ, ವೆಂಕಟೇಶ್, ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು