ದೊಡ್ಡಬಳ್ಳಾಪುರ: ರಾಜ್ಯದ ದಕ್ಷಿಣ ಭಾಗದಲ್ಲಿ ಮುಂದಿನ 3 ದಿನಗಳ ಕಾಲ (ಮೇ 20 ರಿಂದ 23 ವರೆಗೆ) ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ (Rain) ಸಾಧ್ಯತೆಯಿದೆಯೆಂದು ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚಿಸಿದೆ.
ಇದರ ಬೆನ್ನಲ್ಲೇ ಬೆಳಗ್ಗೆಯಿಂದ ದೊಡ್ಡಬಳ್ಳಾಪುರ ತಾಲೂಕಿನಾಧ್ಯಂತ ಮಳೆ (Rain) ಸುರಿಯುತ್ತಿದ್ದು, ದೈನಂದಿನ ಚಟುವಟಿಕೆಗಳಿಗೆ ತೊಡಕಾಗಿದೆ.
ಕೆಲಸಕ್ಕೆ ತೆರಳ ಬೇಕಾದ ಉದ್ಯೋಗಿಗಳು ಮಳೆಯಲ್ಲಿಯೇ ನೆನೆದುಕೊಂಡು ತೆರಳಬೇಕಾದ ಅನಿವಾರ್ಯತೆ ಎದುರಾಗಿದ್ದು, ಜನಜೀವನ ಅಸ್ತವ್ಯಸ್ತ ಉಂಟಾಗಿದೆ.
ಮಳೆಯ ಹಿನ್ನೆಲೆಯಲ್ಲಿ ತಾಲೂಕಿನ ಅನೇಕ ಕಡೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ ಹಾಗೂ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ.
ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರುವುದು ಸಾರ್ವಜನಿಕರು/ಮಕ್ಕಳು/ಕಾರ್ಮಿಕರು ಸಿಡಿಲು ಬಡಿಯುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು.
ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು. ದುರ್ಬಲವಾದ / ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ / ಮರಗಳ ಕೆಳಗೆ ನಿಲ್ಲಬಾರದು.
ಮೇಲಿನ ಅಂಶಗಳನ್ನು ಗುಡುಗು ಸಿಡಿಲು/ ಮಳೆ ಗಾಳಿಯಂತಹ ಸಂದರ್ಭಗಳಲ್ಲಿ ಚಾಚು ತಪ್ಪದೇ ಕಡ್ಡಾಯವಾಗಿ ಪಾಲಿಸಿ.
ಸಾರ್ವಜನಿಕರು ಅಗತ್ಯವಿದ್ದಲ್ಲಿ ಮುಂಜಾಗೃತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು.
ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಸಂಖ್ಯೆ 1077 ಅಥವಾ ಜಿಲ್ಲಾ ಸಹಾಯವಾಣಿ ಸಂಖ್ಯೆ- 080-28388005 ಕರೆ ಮಾಡಿ. ಅಥವಾ ಆಯಾ ತಾಲ್ಲೂಕು ತಹಶೀಲ್ದಾರರ ಕಛೇರಿಗೆ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.