ನವದೆಹಲಿ: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ (B. Saroja Devi) ಅವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಕಂಬನಿ ಮಿಡಿದಿದ್ದಾರೆ.

ಈ ಬಗ್ಗೆ ಶೋಕ ಸಂದೇಶ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಕನ್ನಡದ ಹಿರಿಯ ನಟಿ, ಬಹುಭಾಷಾ ತಾರೆ ಶ್ರೀಮತಿ ಬಿ.ಸರೋಜಾದೇವಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು.
ಮೇರುನಟರಾದ ಡಾ. ರಾಜ್ ಕುಮಾರ್ ಅವರು ಸೇರಿದಂತೆ ಭಾರತದ ಎಲ್ಲಾ ಭಾಷೆಗಳ ದಿಗ್ಗಜ ನಾಯಕ ನಟರೆಲ್ಲರ ಜತೆ ನಟಿಸಿದ್ದ ಸರೋಜಾದೇವಿ ಅವರು, ಅಭಿಮಾನಿಗಳ ಪಾಲಿಗೆ ಅಭಿನಯ ಸರಸ್ವತಿ ಆಗಿದ್ದರು. ಅವರ ಅನನ್ಯ ಅಭಿನಯ ನಮ್ಮೆಲ್ಲರನ್ನೂ ಮಂತ್ರಮುಗ್ಧರನ್ನಾಗಿ ಮಾಡುತ್ತಿತ್ತು ಎಂದು ಹೇಳಿದ್ದಾರೆ.
ಕನ್ನಡ ಬೆಳ್ಳಿತೆರೆಯನ್ನು ಶ್ರೀಮಂತಗೊಳಿಸುವಲ್ಲಿ ಅಪಾರ ಕಾಣಿಕೆ ನೀಡಿರುವ ಅವರು; ಕಿತ್ತೂರು ಚೆನ್ನಮ್ಮ, ಬಬ್ರುವಾಹನ ಸೇರಿದಂತೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಅಗಲಿಕೆ ಚಿತ್ರರಂಗಕ್ಕೆ, ನಾಡಿಗೆ ಬಹುದೊಡ್ಡ ನಷ್ಟ ಎಂದಿರುವ ಕುಮಾರಸ್ವಾಮಿ ಅವರು; ಅಗಲಿದ ಸರೋಜಾದೇವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಬಿ. ಸರೋಜಾ ದೇವಿ ನಿಧನಕ್ಕೆ ಅನಿತಾ ಕುಮಾರಸ್ವಾಮಿ ಶೋಕ
ಹಿರಿಯ ನಟಿ ಬಿ. ಸರೋಜಾ ದೇವಿ ಅವರ ಅಗಲಿಕೆಗೆ ಕಂಬನಿ ಮಿಡಿದಿರುವ ಮಾಜಿ ಶಾಸಕಿ ಹಾಗೂ ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ (Anitha Kumaraswamy) ಅವರು; ಭಾರತೀಯ ಚಿತ್ರರಂಗದ ಪ್ರತಿಭಾನ್ವಿತ ನಟಿ, ಬಹುಭಾಷಾ ಕಲಾವಿದೆ, ಕನ್ನಡ ಚಿತ್ರರಂಗದ ಶ್ರೇಷ್ಠತಾರೆಯಾದ ಶ್ರೀಮತಿ ಬಿ.ಸರೋಜಾದೇವಿ ಅವರ ನಿಧನ ನನಗೆ ಅತೀವ ದುಃಖ ಉಂಟು ಮಾಡಿದೆ ಎಂದು ಹೇಳಿದ್ದಾರೆ.
ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಶೋಕ ಸಂದೇಶದಲ್ಲಿ ಸರೋಜಾ ದೇವಿ ಅವರ ಬಗ್ಗೆ ಭಾವುಕರಾಗಿ ಪ್ರತಿಕ್ರಿಯಿಸಿರುವ ಅವರು; ವೈಯಕ್ತಿಕವಾಗಿ ನನಗೆ ಬಹಳ ಹತ್ತಿರದವರಾದ ಸರೋಜಾ ದೇವಿ ಅವರು, ನಟನೆಯ ಜತೆಗೆ ಸಮಾಜದ ಬಗ್ಗೆಯೂ ಅಪಾರ ಕಳಕಳಿ ಹೊಂದಿದ್ದರು ಎಂದು ತಿಳಿಸಿದ್ದಾರೆ.
ಕಿತ್ತೂರು ಚನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಸೇರಿ ಅನೇಕ ಚಿರಸ್ಮರಣೀಯ ಚಿತ್ರಗಳಲ್ಲಿ ಮನೋಜ್ಞವಾಗಿ ನಟಿಸಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿರುವ ಅವರನ್ನು ಮರೆಯುವಂತಿಲ್ಲ.
ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.