ದೊಡ್ಡಬಳ್ಳಾಪುರ: 2023 ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಮತ್ತು ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳನ್ನು (Guarantee scheme) ಪ್ರಕಟಿಸಿ, ಅವುಗಳನ್ನು ಸಕರಾತ್ಮಕವಾಗಿ ಅನುಷ್ಟಾನಗೊಳಿಸಲಾಗಿದೆ.

ಐದು ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆಯನ್ನು ಮೊಟ್ಟಮೊದಲಿಗೆ ಸರ್ಕಾರ ಜಾರಿಗೊಳಿಸಿದೆ. ಶಕ್ತಿ ಯೋಜನೆಯನ್ನು ಜೂನ್ 11, 2023 ರಿಂದ ಜಾರಿಗೊಳಿಸುವ ಮೂಲಕ ರಾಜ್ಯದ ಎಲ್ಲಾ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಒದಗಿಸಿದೆ.
ಈ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ ಈಗ 500 ಕೋಟಿ ಗಡಿಯನ್ನು ದಾಟಿರುತ್ತದೆ. ಇದೊಂದು ಸಂಭ್ರಮದ ಸಂಗತಿ. ಹೆಣ್ಣುಮಕ್ಕಳಿಗೆ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಕಲ್ಪಿಸಿರುವಂತಹ ಏಕೈಕ ಸರ್ಕಾರ ಕರ್ನಾಟಕ ಸರ್ಕಾರವಾಗಿದೆ.
ಶಕ್ತಿ ಯೋಜನೆಯಡಿಯಲ್ಲಿ ನಾಡಿನ 500 ಕೋಟಿ ಹೆಣ್ಣು ಮಕ್ಕಳು ರಾಜ್ಯದ ಎಲ್ಲಾ ಸರ್ಕಾರಿ ಸ್ವಾಮ್ಯದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿರುವ ಹೆಗ್ಗಳಿಕೆಯನ್ನು ಸರಳ ಹಾಗೂ ಸಂಭ್ರಮವನ್ನು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿಯಿಂದ ಆಚರಿಸಲಾಗುತ್ತಿದೆ.

ಆದ್ದರಿಂದ, ರಾಜ್ಯದಲ್ಲಿ ಶಕ್ತಿ ಯೋಜನೆ ಅಡಿಯಲ್ಲಿ 500 ಕೋಟಿ ಫಲಾನುಭವಿಗಳು ಪ್ರಯಾಣಿಸಿರುವುದನ್ನು ಸಾಂಕೇತಿಕವಾಗಿ ಜುಲೈ 14, 2025 ರಂದು ಬೆಳಿಗ್ಗೆ 10:30 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಹಾಗೂ ತಾಲ್ಲೂಕುಗಳ ಬಸ್ ಡಿಪೋ, ಬಸ್ ನಿಲ್ದಾಣ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಸಮಿತಿಯ ಸದಸ್ಯರುಗಳು ಒಂದು ಬಸ್ಸಿಗೆ ಪೂಜೆಯನ್ನು ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚುವುದರೊಂದಿಗೆ ಆಚರಿಸಲಿದ್ದಾರೆ.
ಅದರಂತೆ ದೊಡ್ಡಬಳ್ಳಾಪುರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ದೊಡ್ಡಬಳ್ಳಾಪುರ ನಗರದ KSRTC ಬಸ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರಿಗೆ ಸಹಿ ಹಂಚುವ ಮೂಲಕ ಸಂಭ್ರಮಿಸಲಾಗುವುದು.
ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಎನ್. ವಿಶ್ವನಾಥ ರೆಡ್ಡಿ ಅವರು ತಿಳಿಸಿದ್ದಾರೆ.