ಬೆಂಗಳೂರು: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ (Chandrashekaranath Swamiji) ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D. Deve Gowda), ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar), ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಸಂತಾಪ ಸೂಚಿಸಿದ್ದಾರೆ.
ಹೆಚ್.ಡಿ. ದೇವೇಗೌಡರ ಸಂತಾಪ ಸಂದೇಶ
ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಸಂಸ್ಥಾಪಕ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಲಿಂಗೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖವಾಯಿತು.
ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಮಾರ್ಗದರ್ಶಕರಾಗಿ ಕೆಲಸ ಮಾಡಿದ ಗುರುಗಳಿಗೆ, ಭಗವಂತನು ಸದ್ಗತಿ ಪ್ರಾಪ್ತಿಸಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಆಪಾರ ಸಂಖ್ಯೆಯ ಭಕ್ತರಿಗೆ ನೀಡಲೆಂದು ಹೆಚ್.ಡಿ. ದೇವೇಗೌಡ ಅವರು ಪ್ರಾರ್ಥಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಸಂತಾಪ ಸಂದೇಶ
“ಪೂಜ್ಯ ಸ್ವಾಮೀಜಿಗಳ ನಿಧನದ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ. ಸಮುದಾಯದ ಬೆಳವಣಿಗೆಗೆ ಸ್ವಾಮೀಜಿಯವರು ನೀಡಿದ ಕೊಡುಗೆ ಅಪಾರ. ಶಿಕ್ಷಣದಿಂದ ಮಾತ್ರ ಸಮುದಾಯದ ಪ್ರಗತಿ ಸಾಧ್ಯ ಎಂದು ನಂಬಿದ್ದರು. ತಾವೇ ಕೃಷಿ ಮಾಡಿ ದಾಸೋಹ ಮಾಡುತ್ತಿದ್ದರು. ಅವರ ಅಗಲಿಕೆ ಇಡೀ ಸಮುದಾಯಕ್ಕೆ ದೊಡ್ಡ ನಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.
ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಭಕ್ತರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸಂದೇಶ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿರವರು ಭೈರವೈಕ್ಯರಾದ ಸುದ್ದಿ ತಿಳಿದು ಬಹಳ ದುಃಖವಾಯಿತು.
ಆಧ್ಯಾತ್ಮ ಲೋಕದಲ್ಲಿ ಮಹೋನ್ನತ ಸಾಧನೆ ಮಾಡಿದ್ದ ಪರಮಪೂಜ್ಯರು ಸಮಾಜ ಸೇವೆ ಹಾಗೂ ಧರ್ಮ ಕೈಂಕರ್ಯದಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಿದ್ದರು.
ಪರಮಪೂಜ್ಯರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಕ್ತರಿಗೆ ಶ್ರೀ ಕಾಲ ಭೈರವೇಶ್ವರ ದೇವರು ದಯಪಾಲಿಸಲಿ ಎಂದು ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.