ಬೆಂ.ಗ್ರಾ.ಜಿಲ್ಲೆ: ಗರ್ಭಿಣಿ ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕಾಲಕಾಲಕ್ಕೆ ಲಸಿಕೆ ಪಡೆಯುವುದು ಅವಶ್ಯಕವಾಗಿದ್ದು ಗರ್ಭಿಣಿ, ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರಿಗೆ ಅರಿವು ಮೂಡಿಸಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ (Syeda Aisha) ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆ ಹಾಗೂ ಜಿಲ್ಲಾ ಮಟ್ಟದ ತಾಯಿ ಹಾಗೂ ಶಿಶು ಮರಣ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳ ಹಾಗೂ ಗರ್ಭಿಣಿ ಬಾಣಂತಿಯರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಶಿಶು ಮತ್ತು ತಾಯಿ ಮರಣ ಆಗದಂತೆ ಜಾಗೃತಿ ವಹಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಗರ್ಭಿಣಿ, ಬಾಣಂತಿಯರ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಬಗ್ಗೆ ಅರಿವು ಮೂಡಿಸಿ ಶಿಶು ಹಾರೈಕೆ ಮತ್ತು ಗರ್ಭಿಣಿ, ಬಾಣಂತಿಯರ ಹಾರೈಕೆಯಲ್ಲಿ ನಿರತರಾಗಿ ಎಂದರು.
ವಾತಾವರಣ ಬದಲಾವಣೆ ಸಂಧರ್ಭದಲ್ಲಿ ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯ ಪ್ರಕರಣಗಳು ಉಲ್ಬಣಗೊಳ್ಳುವ ಸಂಭವ ಇರುತ್ತದೆ ಹಾಗಾಗಿ ಆರೋಗ್ಯಾಧಿಕಾರಿಗಳು ಜಾಗೃತರಾಗಿ ಸ್ಥಳೀಯ ಮಟ್ಟದಲ್ಲಿ ಜನ ನಿಬಿಡ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಅರಿವು ಮೂಡಿಸಿ. ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆ ಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ರೋಗಗಳು ಕಂಡು ಬರುತ್ತಿವೆ ಅದಕ್ಕಾಗಿ ರೋಗಗಳ ಬಗ್ಗೆ ಅರಿವು ಮೂಡಿಸಿ ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಕ್ಕ ಕೃಷ್ಣ ರೆಡ್ಡಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಸೀಮಾ ರುದ್ರಪ್ಪ ಮಹಾಬಳೆ, ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ನಾಗೇಶ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.