ಹಾಸನ: ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಾಗುತ್ತಿದ್ದ ವೇಳೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕ್ಯಾಂಟರ್ ಲಾರಿಗೆ ಬೈಕ್ ಅಡ್ಡ ಬಂದಿದೆ. ಇದನ್ನು ತಪ್ಪಿಸಲು ಕ್ಯಾಂಟರ್ ಚಾಲಕ ಯತ್ನಿಸಿದ್ದಾನೆ. ಈ ವೇಳೆ ರಸ್ತೆ ಡಿವೈಡರ್ ದಾಟಿದ ಕ್ಯಾಂಟರ್ ಲಾರಿ ಮೆರವಣಿಗೆ ಕಡೆಗೆ ನುಗ್ಗಿದೆ.
ಈ ವೇಳೆ ಸ್ಥಳದಲ್ಲಿದ್ದ 9 ಜನರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಸ್ಥಳಕ್ಕೆ ದೌಡಾಯಿಸಿದ ಸಂಸದ ಶ್ರೇಯಸ್ ಪಟೇಲ್, ಶಾಸಕ ಎಚ್.ಡಿ. ರೇವಣ್ಣ ಪರಿಶೀಲಿಸಿದ್ದಾರೆ.
ರೂ.5 ಲಕ್ಷ ಪರಿಹಾರ
ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.
ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಕರೆ ನೀಡಿದ್ದಾರೆ.
ನಿಖಿಲ್ ಭೇಟಿ
ಗಣೇಶ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ದುರಂತದಲ್ಲಿ ಸಂಕಷ್ಟಕ್ಕೆ ಒಳಗಾದ ಕುಟುಂಬಸ್ಥರನ್ನು ನಿಖಿಲ್ ಕುಮಾರಸ್ವಾಮಿ ಸಂತೈಸಿದ್ದಾರೆ.
ಹಾಸನದ ಹಿಮ್ಸ್ ಗೆ ಭೇಟಿ ನೀಡಿ ಗಾಯಾಳುಗಳ ಅರೋಗ್ಯ ವಿಚಾರಿಸಿದರು.
ಆರ್ ಅಶೋಕ್ ಆಗ್ರಹ
ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕ್ಯಾಂಟರ್ ಲಾರಿ ನುಗ್ಗಿ ಸಂಭವಿಸಿದ ದಾರುಣ ಅಪಘಾತದಲ್ಲಿ ಎಂಟು ಜನರು ಸಾವಿಗೀಡಾಗಿ 20ಕ್ಕೂ ಹೆಚ್ಚು ಜನ ತೀವ್ರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ತೀವ್ರ ಆಘಾತ ಉಂಟುಮಾಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ಹೇಳಿದ್ದಾರೆ.
ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಮೃತರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ರಾಜ್ಯ ಸರ್ಕಾರ, ಜಿಲ್ಲಾಡಳಿತ ಈ ಕೂಡಲೇ ಗಾಯಗೊಂಡವರ ಚಿಕಿತ್ಸೆಗೆ ಕ್ರಮ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಘೋಷಿಸಿಬೇಕು ಎಂದು ಆಗ್ರಹಿಸಿದ್ದಾರೆ.