ದೊಡ್ಡಬಳ್ಳಾಪುರ: ಇದೇ ತಿಂಗಳ (ನವೆಂಬರ್) 22 ರಂದು ಜಾತ್ಯಾತೀತ ಜನತಾದಳ ಪಕ್ಷದ (JDS) “ರಾಷ್ಟ್ರೀಯ ಮಹಾ ಅಧಿವೇಶನ ” ಬೆಂಗಳೂರಿನ ಜೆಪಿ ಭವನದಲ್ಲಿ ಆಯೋಜಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ದೊಡ್ಡಬಳ್ಳಾಪುರ ನಗರದ ಜೆಡಿಎಸ್ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ಅವರು ಮುಖಂಡರ ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಜೆಡಿಎಸ್ ಪಕ್ಷದ ಬೆಳ್ಳಿ ಉತ್ಸವದ ಅಂಗವಾಗಿ, ರಾಷ್ಟ್ರೀಯ ಮಹಾ ಅಧಿವೇಶನವನ್ನು ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಜೆಪಿ ಭವನದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ರಾಜ್ಯಾ ಜೆಡಿಎಸ್ ಅಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಅನೇಕ ಮುಖಂಡರು ಭಾಗವಹಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ತಾಲೂಕು, ಹೋಬಳಿ ಜೆಡಿಎಸ್ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ನಂತರ ಮಾತನಾಡಿದ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಲಕ್ಷ್ಮೀಪತಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಬಿ.ಮುನೇಗೌಡರ ಸೂಚನೆ ಮೇರೆಗೆ, ನ.22 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಜಾತ್ಯಾತೀತ ಜನತಾದಳ ಪಕ್ಷದ ರಾಷ್ಟ್ರೀಯ ಮಹಾ ಅಧಿವೇಶನದಲ್ಲಿ ದೊಡ್ಡಬಳ್ಳಾಪುರ ತಾಲೂಕಿನಿಂದ ಕಸಬಾ, ದೊಡ್ಡಬೆಳವಂಗಲ, ಮಧುರೆ, ಸಾಸಲು, ತೂಬಗೆರೆ ಹೋಬಳಿಗಳಿಂದ ಸುಮಾರು 300ಕ್ಕೂ ಹೆಚ್ಚು ಮಂದಿ ತೆರಳಲು ಸಿದ್ಧತೆ ನಡೆಸಲಾಗುತ್ತಿದೆ ಎಂದರು.
ಸಭೆಯಲ್ಲಿ ದೊಡ್ಡಬಳ್ಳಾಪುರ ನಗರ ಜೆಡಿಎಸ್ ಅಧ್ಯಕ್ಷ ವಡ್ಡರಹಳ್ಳಿ ರವಿಕುಮಾರ್, ಮಾದ್ಯಮ ವಕ್ತಾರ ಕುಂಟನಹಳ್ಳಿ ಮಂಜುನಾಥ್, ತೂಬಗೆರೆ ಹೋಬಳಿ ಜೆಡಿಎಸ್ ಅಧ್ಯಕ್ಷ ಜಗನ್ನಾಥ ಚಾರ್ ಮತ್ತಿತರರಿದ್ದರು.