ಬೆಂ.ಗ್ರಾ.ಜಿಲ್ಲೆ: ಸಮಾಜದಲ್ಲಿ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ನಮ್ಮ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಲೇ ಬಂದಿದೆ. ಇನ್ನೂ ಒಂದು ವಾರದಲ್ಲಿ ಗೃಹಲಕ್ಷ್ಮಿಯ 23 ನೇ ಕಂತು ಹಣ ನಿಮ್ಮ ಖಾತೆಗೆ ಜಮೆಯಾಗಲಿದೆ, ಹಾಗೂ ಜಿಲ್ಲೆಯಲ್ಲಿ 130 ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲು 5 ಕೋಟಿ ಹಣ ಬಿಡುಗಡೆ ಮಾಡುತ್ತೇನೆಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ (Lakshmi Hebbalkar) ಭರವಸೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಐ.ಸಿ.ಡಿ.ಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತು ರಾಜ್ಯ ಮಟ್ಟದ ಸಮಾವೇಶದ ಪೂರ್ವಭಾವಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆಗೆ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 28 ರಂದು ಬೆಂಗಳೂರಿನಲ್ಲಿ ನಡೆಯುಲಿರುವ ರಾಜ್ಯ ಮಟ್ಟದ ಸಮಾವೇಶದಲ್ಲಿ ಮಹಿಳೆ ಮತ್ತು ಮಕ್ಕಳ ಅಭಿವೃದಿಗೆ ಪೂರಕವಾದ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದ್ದು, ನೀವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಾಹಿಸಿ ಯಶಸ್ವಿಗೊಳಿಸಬೇಕು ಎಂದರು.
ಇಂದಿರಾ ಗಾಂಧಿ ಅವರ ಅಂಗನವಾಡಿ ಪರಿಕಲ್ಪನೆಯಿಂದಾಗಿ ಕರ್ನಾಟಕ ರಾಜ್ಯದಲ್ಲಿ ಮೈಸೂರಿನ ಟಿ.ನರಸೀಪುರದಲ್ಲಿ ಮೊಟ್ಟಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಯಿತು ಇಂದಿಗೂ ಕೂಡ ಪ್ರತಿಯೊಂದು ಗ್ರಾಮಗಳಲ್ಲಿ ಅಂಗನವಾಡಿ ಕೇಂದ್ರ ಸ್ಥಾಪಿತವಾಗಿದೆ ಇದೊಂದು ಐತಿಹಾಸಿಕ ಮೈಲಿಗಲ್ಲು.
ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹಾಗೂ ಶೋಷಣೆಯನ್ನು ತಡೆಯುವ ನಿಟ್ಟಿನಲ್ಲಿ ಇದೇ ನವೆಂಬರ್ 28 ರಂದು ರಾಜ್ಯಡ್ಯಾದಂತ ಪ್ರತಿ ಜಿಲ್ಲೆಯಲ್ಲಿಯೂ ಪಕ್ಕಪಡೆ ಪ್ರಾರಂಭವಾಗುತ್ತಿದೆ. ಇದರಲ್ಲಿ ಆರು ಜನ ಮಹಿಳೆಯರು ಕಾರ್ಯನಿರ್ವಹಿಸುತ್ತಾರೆ ಯಾವುದೇ ಸಂದರ್ಭದಲ್ಲಿಯೂ ಮಹಿಳೆಯರು ಕ್ಯೂಆರ್ ಕೋಡ್ ಆಪ್ ಅಥವಾ ಫೋನ್ ನಂಬರ್ ಮೂಲಕ ಅಕ್ಕಪಡೆಯನ್ನು ಸಂಪರ್ಕಿಸಿ ಸಹಾಯ ಪಡೆಯಬಹುದು.
ಗೃಹಲಕ್ಷ್ಮಿ ಬ್ಯಾಂಕ್ ಯೋಜನೆಯು ಮಹಿಳೆಯರಿಗೆ ಆರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಪ್ರಾರಂಭಿಸಲಾಗುತ್ತಿದ್ದು, ಪ್ರತಿಯೊಬ್ಬ ಮಹಿಳೆಯು ಒಂದು ಸಾವಿರ ರೂ.ಗಳಿಂದ ಖಾತೆಯನ್ನು ಪ್ರಾರಂಭಿಸಿ ಪ್ರತಿ ತಿಂಗಳು 200 ರೂಗಳನ್ನು ಉಳಿತಾಯ ಮಾಡಿದರೆ, ಆರು ತಿಂಗಳ ನಂತರ ಮಹಿಳೆಯು 30 ಸಾವಿರ ರೂ.ಗಳಿಂದ 3 ಲಕ್ಷಗಳ ವರೆಗೆ ರಾಷ್ಟ್ರೀಕೃತ ಬ್ಯಾಂಕ್ ದರದಲ್ಲಿ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ನೀಡಲಾಗುವುದು ಎಂದರು.
ರಾಜ್ಯದ ಐದು ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ ಹಾಗೂ ಯುಕೆಜಿ ಪೂರ್ವ ಪ್ರಾಥಮಿಕ ಆರಂಭಿಸ ಲಾಗುತ್ತಿದೆ. ಖಾಸಗಿ ಶಾಲೆಗಳಲ್ಲಿ ಸಿಗುವಂತಹ ಗುಣಮಟ್ಟದ ಹಾಗೂ ಇಂಗ್ಲಿಷ್ ಶಿಕ್ಷಣ ಬಡಮಕ್ಕಳಿಗೂ ಸಿಗಬೇಕು ಎಂಬುದನ್ನ ಮನಗಂಡ ರಾಜ್ಯ ಸರ್ಕಾರ ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿಗಳನ್ನು ಆರಂಭಿಸಲು ಮುಂದಾಗಿದ್ದೇವೆ.
ಗೃಹ ಲಕ್ಷ್ಮಿ ಯೋಜನೆಯ ಯಶಸ್ಸಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರೆ ಕಾರಣ, ಕಳೆದ ಬಾರಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು 1000 ಹೆಚ್ಚಿಸಲಾಗಿದೆ ಮುಂದಿನ ದಿನಗಳಲ್ಲಿ ಮತ್ತೊಂದು ಸಾವಿರ ಹೆಚ್ಚಿ ಸುವಂತೆ ಮನವಿ ಮಾಡಲಾಗುವುದು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಮಾತನಾಡಿ, ನಮ್ಮ ಸರ್ಕಾರ ಜನಪರವಾಗಿ ಕೆಲಸ ಮಾಡಿಕೊಂಡು ಬರುತ್ತಿದೆ. ನಾವು ಚುನಾವಣೆ ಪ್ರಣಾಳಿಕೆಯಲ್ಲಿ ಹೇಳಿದ ಹಾಗೇ ಐದು ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ. ದೇಶದಲ್ಲಿ ಎಲ್ಲರೂ ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಸಮಾನತೆಯಿಂದ ಬದುಕಲು ಡಾ.ಬಿ.ಆರ್ ಅಂಬೇಡ್ಕರ್ ಅವರು ನಮಗೆ ಸಂವಿಧಾನವನ್ನು ನೀಡಿದ್ದಾರೆ. ಹಾಗೇ ದೇಶದ ಒಳಿತಿಗೆ ಗಾಂಧೀಜಿ, ಸುಭಾಷ್ ಚಂದ್ರಬೋಸ್, ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಧ್ಯೇಯವನ್ನು ಅಳವಡಿಸಿಕೊಳ್ಳಬೇಕು.
ರಾಜೀವ್ ಗಾಂಧಿ ಮತ್ತು ಮನಮೋಹನ್ ಸಿಂಗ್ ಅವರು ಪ್ರಧಾನಿಯಾದ ಸಮಯದಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ತರಲು ಶ್ರಮಿಸಿದವರು. ಜನರು ಸಮಾಜದಲ್ಲಿ ನೆಮ್ಮದಿಯಾಗಿ ಬದುಕಲು ಈ ಪಂಚ ಗ್ಯಾರಂಟಿಗಳು ದಾರಿಯಾಗಿವೆ. ಮೊಟ್ಟ ಮೊದಲ ಬಾರಿಗೆ
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು ನಾವು ಜಾರಿ ಮಾಡಿದೆವು. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ,
ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಹೆಚ್ಚು ಮಾಡಿದ ಮೊಟ್ಟ ಮೊದಲ ಪಕ್ಷ ನಮ್ಮದು ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಬಿ ರಾಜಣ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ ಎನ್ ಅನುರಾಧ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ದೇವನಹಳ್ಳಿ ತಾಲೂಕು ಅಧ್ಯಕ್ಷರಾದ ಸಿ ಜಗನ್ನಾಥ್, ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಜಯಲಕ್ಷ್ಮಮ್ಮ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಸಿ ಮಂಜುನಾಥ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ ಎಂ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕ ಉಪಸ್ಥಿತರಿದ್ದರು.