ಹಾಸನ: ರಾಜ್ಯದಲ್ಲಿ ಅಭಿವೃದ್ಧಿ ಇದ್ದರೆ ತಾನೇ ಕುಂಠಿತ ಆಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಪ್ರಶ್ನಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿಗಾಗಿ ಯಾವುದೇ ಅನುದಾನ ನೀಡುತ್ತಿಲ್ಲ. ಎಂಥ ಕೆಟ್ಟ ಪರಿಸ್ಥಿತಿ ಬಂದಿದೆ ಎಂದರೆ ಗುಂಡಿ ಮುಚ್ಚಲೂ ಹಣ ಕೊಡುತ್ತಿಲ್ಲ. ಇದರ ಪರಿಣಾಮವಾಗಿ ಆಡಳಿತ ಪಕ್ಷದ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂಬ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದರು.
ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲು ಕೆಲವರು ಹೋರಾಟ ಮಾಡುತ್ತಿದ್ದಾರೆ. ಕೆಲವರು ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಹೋರಾಟ ಮಾಡುತ್ತಿದ್ದಾರೆ. ಇನ್ನೂ ಕೆಲವರು ಅವರಿಬ್ಬರ ಜಗಳದಲ್ಲಿ ತಾವು ಮುಖ್ಯಮಂತ್ರಿ ಆಗಬೇಕೆಂದು ಸಿಎಂ ಕುರ್ಚಿಗೆ ಟವೆಲ್ ಹಾಕಿಕೊಂಡು ಕೂತಿದ್ದಾರೆ. ಒಟ್ಟಾರೆಯಾಗಿ ರಾಜ್ಯದ ರೈತರ ಪರಿಸ್ಥಿತಿ ಬಗ್ಗೆ ಈ ಸರಕಾರ ಕಿಂಚಿತ್ತೂ ಕಾಳಜಿ ವಹಿಸುತ್ತಿಲ್ಲ ಎಂದು ಟೀಕಿಸಿದರು.
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು. ಗೃಹ ಸಚಿವರಿಗೆ ಕೇಳಿದರೆ ನನಗೇನೂ ಗೊತ್ತಿಲ್ಲ ಎಂಬ ಉತ್ತರ ಬಿಟ್ಟರೆ ಬೇರೇನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ನುಡಿದರು. ರಾಜ್ಯದಲ್ಲಿ ಗೃಹ ಸಚಿವರು ಇದ್ದಾರಾ ಎಂದು ಜನಸಾಮಾನ್ಯರು ಪ್ರಶ್ನಿಸುವಂತಾಗಿದೆ ಎಂದು ತಿಳಿಸಿದರು.