ಬೆಂ.ಗ್ರಾ.ಜಿಲ್ಲೆ: ಮಾವು (Mango) ಬೆಳೆಯಲ್ಲಿ ಹೂವು ಬಿಡುವ ಮತ್ತು ಕಾಯಿ ಕಚ್ಚುವ ಹಂಗಾಮಿನಲ್ಲಿ ಬೆಳೆಗಾರರು ಕೈಗೊಳ್ಳಬೇಕಾಗಿರುವ ಸಸ್ಯ ಸಂರಕ್ಷಣಾ ಮತ್ತು ಪೂರಕ ಕ್ರಮಗಳ ಬಗ್ಗೆ ರೈತರಿಗೆ, ಮಾವು ಬೆಳೆಗಾರರಿಗೆ ಡಿಸೆಂಬರ್ 05 ರಂದು ವಿಚಾರ ಸಂಕಿರಣ (Seminar) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತೋಟಗಾರಿಕೆ ಇಲಾಖೆ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ ಆಯೋಜಿಸಿದ್ದು ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಬೆಂಡಿಗಾನಹಳ್ಳಿ ಗ್ರಾಮದ ಮಾವು ಬೆಳೆಗಾರರಾದ ಅಶ್ವಥ್ ನಾರಾಯಣಗೌಡ ರವರ ತೋಟ ಈ ಸ್ಥಳದಲ್ಲಿ ಡಿಸೆಂಬರ್ 05 ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಿಗದಿಪಡಿಸಲಾಗಿದೆ.
ವಿಷಯ ತಜ್ಞರಾದ ನಿವೃತ್ತ ಅಪರ ನಿರ್ದೇಶಕರು ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಡಾ. ಹಿತ್ತಲಮನಿ ರವರು ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಮಾವು ಬೆಳೆಗೆ ಸಂಬಂಧಿಸಿದಂತೆ ಹಲವು ಮಾಹಿತಿ ಹಂಚಿಕೊಳ್ಳಲಿದ್ದಾರೆ.
ಜಿಲ್ಲೆಯ ಎಲ್ಲಾ ತಾಲ್ಲೂಕಿನ ಮಾವು ಬೆಳೆಗಾರರು, ರೈತರು ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ತೋಟಗಾರಿಕೆ ಇಲಾಖೆಯ ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)