ದೊಡ್ಡಬಳ್ಳಾಪುರ: ಅಪಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದ ತಾಲೂಕಿನ ಶಾಕಲದೇವನಪುರದ ಜಾನಪದ ಗಾಯಕ ವಿ. ರಾಮಚಂದ್ರ (V. Ramachandra) ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 2ಗಂಟೆಗೆ ಸ್ವಗ್ರಾಮ ಶಾಕಲದೇವನಪುರದಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಡಿ.9ರಂದು ತಾಲೂಕಿನ ನಾಗದೇನಹಳ್ಳಿ ಬಳಿ ವಿ.ರಾಮಚಂದ್ರ ಅವರು ಚಲಾಯಿಸುತ್ತಿದ್ದ ಕಾರು ಹಾಗೂ ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು, ತೀವ್ರವಾಗಿ ಗಾಯಗೊಂಡಿದ್ದ ರಾಮಚಂದ್ರ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ.
ಜಾನಪದ ಗಾಯಕರಾದ ವಿ.ರಾಮಚಂದ್ರ ಅವರು, ದೂರದರ್ಶನ ಸೇರಿದಂತೆ ವಿವಿಧ ವಾಹಿನಿಗಳು ಸೇರಿ, ನೂರಾರು ಕಾರ್ಯಕ್ರಮಗಳನ್ನು ನೀಡಿದ್ದರು.
ಜಾನಪದ ಸಾಂಸ್ಕೃತಿಕ ಕಲಾ ಸಂಘದ ಸಂಸ್ಥಾಪಕ ಕಾರ್ಯದರ್ಶಿಗಳಾಗಿ ಜಾನಪದ ಕಲಾ ಉತ್ಸವ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.