ದೊಡ್ಡಬಳ್ಳಾಪುರ: ಜೆಡಿಎಸ್ (JDS) ಯುವಕ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರ ಸೂಚನೆಯಂತೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಬೂತ್ ಕಮಿಟಿ ರಚನೆ, ನೊಂದಣಿಗೆ ತಾಲೂಕಿನ ರಾಜಘಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಚಾಲನೆ ನೀಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B. Munegowda) ಅವರು ಹೇಳಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ಅವರು, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ, ವಿಧಾನಸಭೆ, ಲೋಕಸಭೆ ಚುನಾವಣೆಗೆ ಪಕ್ಷವನ್ನು ಬೂತ್ ಮಟ್ಟದಿಂದ ಸದೃಢಗೊಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಬೂತ್ ಕಮಿಟಿ ರಚಿಸಿ, BL 2ಗೆ ಇಬ್ಬರನ್ನು ನೇಮಕ ಹಾಗೂ 25 ಸದಸ್ಯರು ನೊಂದಣಿ ಮಾಡಲಾಗುತ್ತಿದೆ.
ನಾಳೆ (ಜ.09) ರಂದು ಬೆಳಗ್ಗೆ 10 ಗಂಟೆಗೆ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಜೆಡಿಎಸ್ ಬೂತ್ ಕಮಿಟಿಗೆ ಚಾಲನೆ ನೀಡಲಾಗುತ್ತಿದ್ದು, ಇದೇ ವೇಳೆ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಗುವುದು.
ಈ ಕಾರ್ಯಕ್ರಮದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷರಾದಿಯಾಗಿ, ಪದಾಧಿಕಾರಿಗಳು, ಹೋಬಳಿ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಸೂಚನೆ ಬಳಿಕ ನಿರ್ಣಯ
ಇನ್ನು ಜ.10 ರಂದು ಆಯೋಜಿಸಲಾಗಿರುವ ಜೆಡಿಎಸ್ ಕಾರ್ಯಕರ್ತರ ಸಭೆಗೆ ಭಾಗಿಯಾಗುವಿರಾ ಎಂದು ಕೇಳಲಾದ ಪ್ರಶ್ನೆಗೆ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾ ರೆಡ್ಡಿ ಅವರ ಸೂಚನೆ ಬಳಿಕ ನಿರ್ಣಯ ಕೈಗೊಳ್ಳಲಾಗುವುದು ಎಂದು ಬಿ.ಮುನೇಗೌಡ ತಿಳಿಸಿದ್ದಾರೆ.