ಬೀದರ್: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ (Bhimana Khandre) ಅವರು ಶುಕ್ರವಾರ ನಿಧನರಾದರು. ಅವರಿಗೆ 102 ವರ್ಷ ವಯಸ್ಸಾಗಿತ್ತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೀದರ್ ನಗರದ ಗುದಗೆ ಮಲ್ಟಿ ಸ್ಪೆಷಾಲಿಟಿ ಆ್ಯಂಡ್ ಸೂಪರ್ ಸ್ಪೆಷಾಲಿಟಿ ಆಸತ್ರೆಗೆ ದಾಖಲಿಸಲಾಗಿತ್ತು.
ಸತತವಾಗಿ ಆರೋಗ್ಯ ಕ್ಷೀಣಿಸಿದ ಕಾರಣ ಸೋಮವಾರ (ಜ.12) ಅವರನ್ನು ಮನೆಗೆ ಕೊಂಡೊಯ್ಯಲಾಗಿತ್ತು. ಬಳಿಕ ಮನೆಯಲ್ಲಿಯೇ ವೈದ್ಯರ ತಂಡ ಉಪಚರಿಸುತ್ತಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು.
ಶುಕ್ರವಾರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ರಾತ್ರಿ ನಿಧನರಾದರು.
ಭೀಮಣ್ಣ ಖಂಡ್ರೆಯವರಿಗೆ ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಇಬ್ಬರು ಪುತ್ರರು, ಐದು ಜನ ಪುತ್ರಿಯರು ಇದ್ದಾರೆ. ಗಂಡು ಮಕ್ಕಳ ಪೈಕಿ ಹಿರಿಯ ಮಗ, ಮಾಜಿ ಶಾಸಕ ವಿಜಯಕುಮಾರ್ ಖಂಡ್ರೆ ಅವರು 2019ರಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದರು.
1953ರಲ್ಲಿ ಭಾಲ್ಕಿ ಪುರಸಭೆಯ ಪ್ರಥಮ ಚುನಾಯಿತ ಅಧ್ಯಕ್ಷರಾಗುವ ಮೂಲಕ ಸಾರ್ವಜನಿಕ ಜೀವನಕ್ಕೆ ಪ್ರವೇಶಿಸಿದ್ದ ಭೀಮಣ್ಣ ಖಂಡ್ರೆ ಅವರು 1962ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿ 4 ಬಾರಿ ಶಾಸಕರಾಗಿ, 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಎಂ.ವೀರಪ್ಪ ಮೊಯ್ಲಿ ಅವರ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.