ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಯ (Guarantee scheme) ಕುಂದುಕೊರತೆ ಸಭೆಗಳನ್ನು ಇದೇ ತಿಂಗಳ 29 ರಿಂದ ಆರಂಭಿಸಲಾಗುತ್ತಿದೆ.
ಪ್ರತಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್. ವಿಶ್ವನಾಥ ರೆಡ್ಡಿ ( Vishwanath Reddy) ಅವರ ಅಧ್ಯಕ್ಷತೆಯಲ್ಲಿ ಈ ಸಭೆಗಳನ್ನು ಆಯೋಜಿಸಲಾಗುತ್ತಿದೆ.
ಈ ಶಿಬಿರಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿನ ನೋಂದಣಿ ಬಾಕಿ, ತಾಂತ್ರಿಕ ದೋಷಗಳು, ಬಸ್ ಸೌಲಭ್ಯ, ಐಟಿ ಮತ್ತು ಜಿಎಸ್ಟಿ ವ್ಯಾಪ್ತಿಯ ಮಹಿಳೆಯರ ಪರಿಶೀಲನೆ ಉಚಿತ ವಿದ್ಯುತ್ ಯೋಜನೆ ಪಡೆಯಲು ತೊಡಕು, ಯುವ ನಿಧಿ ಮುಂತಾದ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ದೊರಕಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದು ತಿಳಿದು ಬಂದಿದೆ.
ಅದರಂತೆ ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ 28 ಗ್ರಾಮ ಪಂಚಾಯಿತಿಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಶಿಬಿರವನ್ನು ಆಯೋಜಿಸಲಾಗಿದ್ದು, ವಿವಿಧ ಇಲಾಖೆಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ವೇಳಾ ಪಟ್ಟಿ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಗ್ರಾಮಪಂಚಾಯಿತಿ ಪಿಡಿಒಗಳಿಗೆ ಸಭೆಯ ಕುರಿತಂತೆ ವ್ಯಾಪಕ ಪ್ರಚಾರದ ಮೂಲಕ ಸಾರ್ವಜನಿಕರಿಗೆ ತಿಳಿಸಲು ಹಾಗೂ ಸಭೆಗೆ ಸೂಕ್ತ ವ್ಯವಸ್ಥೆ ಮಾಡಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.