ಬೆಂಗಳೂರು: ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಪ್ರಕರಣದ ವಿವರಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯದ ನಿರ್ಬಂಧ ಆದೇಶವನ್ನು ಉಲ್ಲಂಘಿಸುತ್ತಿರುವ ಮಾಧ್ಯಮಗಳ (Private channels) ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ನಟ ದರ್ಶನ್ (Actor Darshan) ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಕೆಲ ಖಾಸಗಿ ಚಾನೆಲ್‌ಗಳು ಗ್ರಾಫಿಕ್ಸ್ ಮತ್ತು ಎಐ ಆಧಾರಿತ ಅನಿಮೇಷನ್‌ಗಳನ್ನು ಬಳಸಿಕೊಂಡು ನ್ಯಾಯಾಲಯದ ಪ್ರಕ್ರಿಯೆಗಳು ಮತ್ತು ಅಪರಾಧದ ದೃಶ್ಯವನ್ನು ಮರು ಸೃಷ್ಟಿಸುತ್ತಿವೆ ಮತ್ತು ವಿಚಾರಣಾ ನ್ಯಾಯಾಲಯವು ದಾಖಲಿಸಿದ ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಚರ್ಚೆಗಳನ್ನು ನಡೆಸುತ್ತಿವೆ.
ಇದು 2024ರಲ್ಲಿ ಹೈಕೋರ್ಟ್ ಮತ್ತು ಸಿಟಿ ಸಿವಿಲ್ ನ್ಯಾಯಾಲಯವು ಹೊರಡಿಸಿದ ತಡೆಯಾಜ್ಞೆಯ ಆದೇಶಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದರ್ಶನ್ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ.
ಕರ್ನಾಟಕ ಹೈಕೋರ್ಟ್ ಮತ್ತು ಸಿಟಿ ಸಿವಿಲ್ ನ್ಯಾಯಾಲಯವು 2024 ರಲ್ಲಿ ಹೊರಡಿಸಿದ ತಡೆಯಾಜ್ಞೆ ಆದೇಶಗಳ “ಸಮಗ್ರ ಉಲ್ಲಂಘನೆ”ಯಲ್ಲಿ ಇದು ಸೇರಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ, ಈ ಪ್ರಕರಣಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಪ್ರಸಾರ ಮಾಡುವುದನ್ನು ಮಾಧ್ಯಮಗಳಿಗೆ ನಿರ್ಬಂಧಿಸಿತು.
ಕೋರ್ಟ್ ಆದೇಶಗಳನ್ನು ಉಲ್ಲಂಘಿಸುತ್ತಿರುವ ಮಾಧ್ಯಮಗಳ (ಚಾನೆಲ್) ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.
ನ್ಯಾಯಾಲಯವು ಈ ವಿಷಯದಲ್ಲಿ ಕೇಂದ್ರ ಸರ್ಕಾರದ ನಿಲುವನ್ನು ಕೇಳಿತು. ಇದಕ್ಕೆ ಉತ್ತರಿಸಿದ ಕೇಂದ್ರ ಸರ್ಕಾರದ ಪರ ವಕೀಲರು, ನಟ ದರ್ಶನ್ ಅವರ ಮನವಿಯನ್ನು ಪರಿಗಣಿಸಿ, ಚಾನೆಲ್‌ಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಬಹುದು ಎಂಬುದರ ಕುರಿತು ಸೋಮವಾರದೊಳಗೆ ಸ್ಪಷ್ಟನೆ ನೀಡುವುದಾಗಿ ತಿಳಿಸಿದರು.
ಕೇಂದ್ರ ಸರ್ಕಾರವು ತನ್ನ ನಿಲುವನ್ನು ತಿಳಿಸಲು ಸಮಯಾವಕಾಶ ಕೋರಿದ ಹಿನ್ನೆಲೆಯಲ್ಲಿ, ನ್ಯಾಯಪೀಠವು ಈ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿದೆ ಎಂದು ವರದಿಯಾಗಿದೆ.
ಈ ಮೂಲಕ ಹತ್ಯೆ ಆರೋಪ ಪ್ರಕರಣದ ಕುರಿತು ಪದೇ ಪದೇ ದರ್ಶನ್ ಅವರ ತೇಜೊವಧೆ ನಡೆಸುತ್ತಿವೆ ಎಂದು ಅಭಿಮಾನಿಗಳು ಆರೋಪಿಸುತ್ತಿರುವ ಖಾಸಗಿ ಚಾನಲ್‌ಗಳ ಮೇಲೆ ತೂಗುಗತ್ತಿ ನೇತಾಡುತ್ತಿದ್ದು, ಕೇಂದ್ರ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಕಾದು ನೋಡಬೇಕಿದೆ.