ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ಸಿನವರು ಮಹಿಳಾ ಮೀಸಲಾತಿ ಒಂದು ರಾಜಕೀಯ ಗಿಮಿಕ್ ಎಂದಿದ್ದಾರೆ. ಈ ಹೇಳಿಕೆಯ ಮೂಲಕ ದೇಶದ ನಾರಿಶಕ್ತಿಗೆ ಅಪಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷದವರು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಮಹಿಳಾ ಮೀಸಲಾತಿಯು ನರೇಂದ್ರ ಮೋದಿಜಿ ಅವರು ತೆಗೆದುಕೊಂಡ ಐತಿಹಾಸಿಕ ನಿರ್ಣಯ ಎಂದು ತಿಳಿಸಿದರು. ಉಪ ಚುನಾವಣೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳು ವಿಧಾನಸೌಧ ಮತ್ತು ಆಡಳಿತವನ್ನು ಸಂಪೂರ್ಣ ಮರೆತು ಬಾಗಲಕೋಟೆಯಲ್ಲಿ 8-9 ದಿನಗಳ ಕಾಲ ಇದ್ದರು. ದಾವಣಗೆರೆ ಬಗ್ಗೆ ಮುಖ್ಯಮಂತ್ರಿಗಳು ತಲೆ ಕೆಡಿಸಿಕೊಂಡಂತೆ ಕಾಣಲಿಲ್ಲ ಎಂದು ತಿಳಿಸಿದರು.

ಬಾಗಲಕೋಟೆಯಲ್ಲಿ 8-9 ದಿನಗಳ ಕಾಲ ತಮ್ಮ ಪಟಾಲಂ ಜೊತೆ ಸೂಟ್ಕೇಸ್ ಜೊತೆ ಅಲ್ಲೇ ಇದ್ದುದನ್ನು ನೋಡಿದ್ದೀರಿ. ಮುಖ್ಯಮಂತ್ರಿಗಳು ಸಂಪೂರ್ಣ ಹತಾಶರಾಗಿದ್ದರು. ಬಾಗಲಕೋಟೆ, ದಾವಣಗೆರೆ ದಕ್ಷಿಣವನ್ನು ಕಾಂಗ್ರೆಸ್ ಪಕ್ಷದಿಂದ ಕಿತ್ತುಕೊಳ್ಳುವಲ್ಲಿ ಯಶಸ್ವಿ ಆಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎರಡೂ ಕಡೆ ಗೆಲ್ಲುವ ಸಂಪೂರ್ಣ ವಿಶ್ವಾಸ ನಮಗಿದೆ ಎಂದು ತಿಳಿಸಿದರು.
ದಾವಣಗೆರೆ ಸೋಲಿನ ಮುನ್ಸೂಚನೆ ಲಭಿಸಿದ್ದರಿಂದ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರ ರಾಜೀನಾಮೆ ಪಡೆಯುವಂತೆ ಸೂಚನೆ ನೀಡಿದೆ.
ಸಚಿವ ಸಂಪುಟದ ವಿಸ್ತರಣೆಗೆ ಆಗ್ರಹಿಸಿ 38ಕ್ಕೂ ಹೆಚ್ಚು ಶಾಸಕರು ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಡಿ.ಕೆ.ಶಿವಕುಮಾರ್ ಬೆಂಬಲಿಗರು ಸಹ ದೆಹಲಿ ಯಾತ್ರೆ ಪ್ರಾರಂಭ ಮಾಡಿದ್ದನ್ನು ಗಮನಿಸಿದರೆ, ಉಪ ಚುನಾವಣೆ ಫಲಿತಾಂಶದ ನಂತರ ಆಡಳಿತ ಪಕ್ಷವಾದ ಕಾಂಗ್ರೆಸ್ ಪಕ್ಷದಲ್ಲಿ ಅಲ್ಲೋಲಕಲ್ಲೋಲ ಆಗಲಿದೆ. ಅದರ ಸ್ಪಷ್ಟ ಮುನ್ಸೂಚನೆ ಕಾಣುತ್ತಿದೆ ಎಂದು ತಿಳಿಸಿದರು.
ಚುನಾವಣಾ ಫಲಿತಾಂಶದ ಬಳಿಕ ಇವರಿಗೆ ಜ್ಞಾನೋದಯ ಆಗಲಿದೆ ಎಂದು ಪ್ರಶ್ನೆಗೆ ಉತ್ತರಿಸಿದರು. ಅಭಿವೃದ್ಧಿಶೂನ್ಯತೆ, ಓಲೈಕೆ ರಾಜಕಾರಣಕ್ಕೆ ಜನರು ಉತ್ತರ ಕೊಡಲಿದ್ದಾರೆ ಎಂದರು.