ಬೆಂ.ಗ್ರಾ.ಜಿಲ್ಲೆ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ (B.R. Ambedkar) ರವರ ಜೀವನ ಚರಿತ್ರೆ, ಸಾಧನೆಯನ್ನು ಓದಿದರೆ ಸಾಲದು, ಜತೆಗೆ ಅವರ ಸಂದೇಶ, ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ (Dr.K.N. Anuradha) ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಅವರು ಪುಷ್ಪನಮನ ಸಲ್ಲಿಸಿ, ನಂತರ ಮಾತನಾಡಿದರು.

ಭಾರತ ದೇಶ ಕಂಡ ಅಪ್ರತಿಮ ಮಹಾನ್ ಧೀಮಂತ ವ್ಯಕ್ತಿ, ಸಂವಿಧಾನವನ್ನು ರಚಿಸಿಕೊಟ್ಟ ಅದ್ಭುತ ಜ್ಞಾನಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಕೊಡುಗೆ ಅಪಾರ ವಾದದ್ದು. ನಾವೆಲ್ಲರೂ ಮುಂದಿನ ಪೀಳಿಗೆಗೆ ಡಾ.ಬಿ.ಆರ್. ಅಂಬೇಡ್ಕರ್ ರವರ ಜೀವನಾದರ್ಶ, ಮೌಲ್ಯಗಳು, ದೇಶಕ್ಕಾಗಿ ನೀಡಿದ ಸಂವಿಧಾನದ ಆಶಯವನ್ನು ತಿಳಿಸುವ ಜತೆಗೆ ರೂಡಿಸಿಕೊಳ್ಳುವಂತೆ ಮಾಡಬೇಕು ಎಂದರು.
ವಿದೇಶಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ-ಸಿದ್ದಾಂತ, ಜೀವನಾದರ್ಶ ಕುರಿತು ಸಂಶೋಧನಾ ವಿಷಯಗಳಾಗಿ ಅಧ್ಯಯನ ಮಾಡಲಾಗುತ್ತಿದೆ. ಇದು ಭಾರತೀಯರು ಬಹಳಷ್ಟು ಹೆಮ್ಮೆ ಪಡುವಂತಹ ಸಂಗತಿ ಎಂದು ಹೇಳಿದರು.
ಅಂಬೇಡ್ಕರ್ ಅವರು ಹಲವು ಪದವಿ ಪಡೆದಿದ್ದರು. ಅವರಂತೆ ಇಂದಿನ ಯುವ ಸಮೂಹವು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವುದರಿಂದ ದೇಶದಲ್ಲಿ ಇನ್ನೂ ಮಹತ್ತರವಾದ ಬದಲಾವಣೆಯನ್ನು ನೋಡಬಹುದು ಎಂದರು.
ಉಪನ್ಯಾಸಕ ಶಿವಮೂರ್ತಿ ಅಂಬೇಡ್ಕರ್ ಕುರಿತು ಉಪನ್ಯಾಸ ನೀಡಿದರು. ಮುಖಂಡರುಗಳಾದ ರವಿಕಲಾ, ಮ್ಯಾಥ್ಯು ಮುನಿಯಪ್ಪ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪ್ರೇಮಾ, ದಲಿತ ಸಂಘಟನೆಗಳು, ವಿವಿಧ ಸಮುದಾಯದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.