ಮಂಡ್ಯ: ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೆರವೇರಿಸಿದರು.

ಆದಿಚುಂಚನ ಗಿರಿಯಲ್ಲಿ ಸುಮಾರು 80 ಕೋಟಿ ರೂ. ವೆಚ್ಚದಲ್ಲಿ ಭೈರವೈಕ್ಯ ಮಂದಿರ ನಿರ್ಮಾಣವಾಗಿದೆ.


ಚಾಲುಕ್ಯ, ಹೊಯ್ಸಳ, ಚೋಳರು ಮತ್ತು ಗಂಗರ ಕಾಲದ ಶಿಲ್ಪಕಲೆಗಳ ಸಮಾಗಮ ದೊಂದಿಗೆ ದ್ರಾವಿಡ ಶೈಲಿಯಲ್ಲಿ ನಿರ್ಮಾಣವಾಗಿರುವ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಬೆಳಗ್ಗೆ 10.05ಕ್ಕೆ ಬೆಂಗಳೂರಿನ ಎಚ್‌ಎಎಲ್ ಏರ್‌ಪೋರ್ಟ್‌ಗೆ ಆಗಮಿಸಿದ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದರು.
ಬಳಿಕ ಪ್ರಧಾನಿ ಮೋದಿ ಅವರು ರಸ್ತೆ ಮಾರ್ಗದ ಮೂಲಕ ಶ್ರೀಕ್ಷೇತ್ರ ಆದಿ ಚುಂಚನಗಿರಿಗೆ ಆಗಮಿಸಿದರು.
ಮೋದಿ ಮೊದಲು ಗೋರಕ್ಷಕನಾಥರು ತಪಸ್ಸು ಮಾಡಿದ ಜ್ವಾಲಾಪೀಠ ದರ್ಶನ ಮಾಡಿದ ನಂತರ ಕಾಲಭೈರವೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಶ್ರೀಗಿರಿ ತಪೋವನದಿಂದ 1.5 ಕಿ.ಮೀ. ದೂರದಲ್ಲಿರುವ ಶ್ರೀಗುರು ಭೈರವೈಕ್ಯ ಮಂದಿರವನ್ನು ಬೆಳಗ್ಗೆ 11 ಗಂಟೆಗೆ ಉದ್ಘಾಟಿಸಿದರು. ನಂತರ ಬಿಜಿಎಸ್ ಕ್ರೀಡಾಂಗಣದಲ್ಲಿ ವೇದಿಕೆ ಜಾಜ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡಿದರು.
ಈ ವೇಳೆ ರಾಜ್ಯಪಾಲರಾದ ಥಾವರ್ ಚಂದ್ ಗೆಹೋಥ್, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಕೃಷಿ ಸಚಿವ ಚೆಲುವರಾಯ ಸ್ವಾಮಿ, ಶ್ರೀ ಆದಿಚುಂಚನಗಿರಿ ಮಠದ ಶ್ರೀ ಡಾ. ನಿರ್ಮಲಾನಂದ ನಾಥ ಮಹಾಸ್ವಾಮೀಜಿ, ವಿರೋಧ ಪಕ್ಷ ನಾಯಕ ಆರ್. ಅಶೋಕ್ ಮತ್ತಿತರರಿದ್ದರು.
ಬಳಿಕ ಮೋದಿ ಅವರು ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಕೇರಳಕ್ಕೆ ಪ್ರಯಾಣ ಬೆಳೆಸಿದರು.
2 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಆದಿಚುಂಚನಗಿರಿಯಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿತ್ತಿ,. ಆದಿಚುಂಚನಗಿರಿ ಕ್ಷೇತ್ರದಾದ್ಯಂತ ಪ್ಲೆಕ್ಸ್, ಕಟೌಟ್ ರಾರಾಜಿಸುತ್ತಿದ್ದವು. ಭದ್ರತೆಗೆ 2 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.
ಇದಲ್ಲದೆ, ಆದಿಚುಂಚನಗಿರಿ ಸುತ್ತಮುತ್ತ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣ ಪಂಚಾಯಿತಿಯ 8 ಕಿಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಆದೇಶ ಹೊರಡಿಸಿದ್ದಾರೆ.
