ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದು (ಏ.15) ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಿರ್ಮಾಣ ವಾಗಿರುವ ಮಂದಿರದ ಭೈರವೈಕ್ಯ ಉದ್ಘಾಟನೆ ಮಾಡಲಿದ್ದಾರೆ.

ಆದಿಚುಂಚನ ಗಿರಿಯಲ್ಲಿ ಸುಮಾರು 80 ಕೋಟಿ ರೂ. ವೆಚ್ಚದಲ್ಲಿ ಭೈರವೈಕ್ಯ ಮಂದಿರ ನಿರ್ಮಾಣವಾಗಿದೆ.

ಚಾಲುಕ್ಯ, ಹೊಯ್ಸಳ, ಚೋಳರು ಮತ್ತು ಗಂಗರ ಕಾಲದ ಶಿಲ್ಪಕಲೆಗಳ ಸಮಾಗಮ ದೊಂದಿಗೆ ದ್ರಾವಿಡ ಶೈಲಿಯಲ್ಲಿ ನಿರ್ಮಾಣವಾಗಿರುವ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಬೆಳಗ್ಗೆ 10.05ಕ್ಕೆ ಬೆಂಗಳೂರಿನ ಎಚ್‌ಎಎಲ್ ಏರ್‌ಪೋರ್ಟ್‌ಗೆ ಆಗಮಿಸಲಿರುವ ಮೋದಿ, ಬಳಿಕ ರಸ್ತೆ ಮಾರ್ಗದ ಮೂಲಕ ಶ್ರೀಕ್ಷೇತ್ರ ಆದಿ ಚುಂಚನಗಿರಿಗೆ ಆಗಮಿಸುತ್ತಾರೆ.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಿ ಮೋದಿಯನ್ನು ಸ್ವಾಗತಿಸಲಿದ್ದಾರೆ. ಮೋದಿ ಮೊದಲು ಗೋರಕ್ಷಕನಾಥರು ತಪಸ್ಸು ಮಾಡಿದ ಜ್ವಾಲಾಪೀಠ ದರ್ಶನ ಮಾಡಲಿರುವ ಪ್ರಧಾನಿ ಮೋದಿ, ನಂತರ ಕಾಲಭೈರವೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಶ್ರೀಗಿರಿ ತಪೋವನದಿಂದ 1.5 ಕಿ.ಮೀ. ದೂರದಲ್ಲಿರುವ ಶ್ರೀಗುರು ಭೈರವೈಕ್ಯ ಮಂದಿರವನ್ನು ಬೆಳಗ್ಗೆ 11 ಗಂಟೆಗೆ ಉದ್ಘಾಟಿಸಲಿದ್ದಾರೆ. ನಂತರ ಬಿಜಿಎಸ್ ಕ್ರೀಡಾಂಗಣದಲ್ಲಿ ವೇದಿಕೆ ಜಾಜ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಳಿಕ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಕೇರಳಕ್ಕೆ ಪ್ರಯಾಣ ಬೆಳೆಸಲಿದ್ದಾರೆ.
2 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಆದಿಚುಂಚನಗಿರಿಯಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಆದಿಚುಂಚನಗಿರಿ ಕ್ಷೇತ್ರದಾದ್ಯಂತ ಪ್ಲೆಕ್ಸ್, ಕಟೌಟ್ ರಾರಾಜಿಸುತ್ತಿವೆ.
ಮಠದ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ 1 ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ ಇದೆ. ಹೀಗಾಗಿ ಆದಿಚುಂಚನಗಿರಿಯಲ್ಲಿ 2 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.
ಇದಲ್ಲದೆ, ಆದಿಚುಂಚನಗಿರಿ ಸುತ್ತಮುತ್ತ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣ ಪಂಚಾಯಿತಿಯ 8 ಕಿಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಆದೇಶ ಹೊರಡಿಸಿದ್ದಾರೆ.