ಬೆಂಗಳೂರು ಗ್ರಾಮಾಂತರ ಜಿಲ್ಲೆ: ಗೃಹಲಕ್ಷ್ಮಿ ಹಣ ಬಿಡುಗಡೆಗೆ ಆಗ್ರಹಿಸಿ ಮತ್ತು ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ಆಡಳಿತವನ್ನು ಖಂಡಿಸಿ ನಾಳೆ (ಮಾ.06) ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಬಳಿ ಬಳಿ ಜೆಡಿಎಸ್ (JDS) ಪಕ್ಷದವತಿಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B.Munegowda) ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಈಗಲೇ ಬೆಂಗಳೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ. ಆದರ ಮುಂದುವರೆದ ಭಾಗವಾಗಿ ನಾಳೆ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹಣ ಬಿಡುಗಡೆ ದಿನಾಂಕವನ್ನು ಪ್ರಕಟಿಸಿಸುವ ವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸರ್ಕಾರ ವಿರುದ್ಧ ಮುನೇಗೌಡ ಆಕ್ರೋಶ ವ್ಯಕ್ತ ಪಡಿಸಿದರು.
ಮಾಧ್ಯಮ ವಕ್ತಾರ ಕುಂಟನಹಳ್ಳಿ ಮಂಜುನಾಥ್ ಮಾಹಿತಿ ನೀಡಿ, ನಾಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡರ ಅಧ್ಯಕ್ಷತೆಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಲಾಗುವುದು.
ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಶ್ರೀನಿವಾಸ್ ಮೂರ್ತಿ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್, ಹುಸ್ಕೂರು ಆನಂದ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ತಾಲೂಕು ಅಧ್ಯಕ್ಷರಾದ ದೊಡ್ಡಬಳ್ಳಾಪುರದ ಲಕ್ಷ್ಮೀಪತಯ್ಯ, ದೇವನಹಳ್ಳಿ ಮುನೇಗೌಡ, ನೆಲಮಂಗಲದ ತಿಮ್ಮರಾಯಪ್ಪ, ಹೊಸಕೋಟೆ ಶ್ರೀಧರ್, ದೊಡ್ಡಬಳ್ಳಾಪುರ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಶಾಂತಮ್ಮ, ದೇವನಹಳ್ಳಿ ಮೀನಾಕ್ಷಮ್ಮ, ನೆಲಮಂಗಲ ಶೋಭ, ಜಿಲ್ಲಾ ಮಹಿಳಾ ಘಟಕದ ವಕ್ತಾರೆ ಶಶಿಕಲಾ ಸೇರಿದಂತೆ ಜಿಲ್ಲಾಪಂಚಾಯಿತಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರು, ಹೋಬಳಿ ಅಧ್ಯಕ್ಷರು, ಕಾರ್ಯಕರ್ತರು ಸೇರಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ ಎಂದರು.