ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2025-26ನೇ ಸಾಲಿನ ಬಜೆಟ್ (Budget 2025)ನಲ್ಲಿ ದೊಡ್ಡಬಳ್ಳಾಪುರದ ಹೆಸರು ಉಲ್ಲೇಖವಿಲ್ಲವಾದರೂ, ತಾಲೂಕಿನ ಆದಿನಾರಾಯಣ ಹೊಸಹಳ್ಳಿಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲು ಘೋಷಿಸಲಾಗಿದೆ.
ಯುವಸಬಲೀಕರಣ ಮತ್ತು ಕ್ರೀಡೆ ಅಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ನಿವೇಶನದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಅಲ್ಲದೆ ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡೋಮ್ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಅಭಿನಂದನೆ ಸಲ್ಲಿಸಿರುವ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ತಾಲೂಕಿನ ಜನತೆ ಹಾಗೂ ಕ್ರೀಡಾಪಟುಗಳ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ನನ್ನ ಅಧಿಕಾರಾವಧಿಯಲ್ಲಿ ಮೀಸಲಿಡಲಾಗಿದ್ದ 20 ಎಕರೆ ಜಮೀನಿನಲ್ಲಿ ಸರ್ಕಾರ ಕ್ರೀಡಾಂಗಣ, ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡೋಮ್ ನಿರ್ಮಿಸಲು ಘೋಷಣೆ ಮಾಡಿರುವುದು ಪ್ರಶಂಸನೀಯ ಕಾರ್ಯ ಎಂದಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ದಾಖಲೆಯ ಬಜೆಟ್ ರೈತರಿಗೆ, ಕಾರ್ಮಿಕರಿಗೆ, ಬಡವರಿಗೆ, ಮಹಿಳೆಯರಿಗೆ ಸಲ್ಲುವಂತೆ ಜನೋಪಯೋಗಿ ಬಜೆಟ್ ಆಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.