ವಿಜಯನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಹೊಸ ಅಲೆ ಸೃಷ್ಟಿಯಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದರು.
ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಸಮರ್ಪಣೆಯ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಟೀಕಿಸಿತು, ಪ್ರಧಾನಿ ಮೋದಿ ಈ ಗ್ಯಾರಂಟಿ ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂಬ ಟೀಕೆಯ ನಡುವೆಯೂ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಿಳಿಸಿದ್ದ 5 ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ರಾಜ್ಯದಲ್ಲೇ ಹೊಸ ಅಲೆ ಸೃಷ್ಟಿಸಿ ಬಡವರಿಗೆ ಸಹಾಯವಾಗಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ರಾಜ್ಯದ ಸುಮಾರು ಒಂದು ಕೋಟಿ ಮಹಿಳೆಯರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ, ಸರ್ಕಾರ ನೀಡಿದ ಹಣದಿಂದ ಮಕ್ಕಳ ವಿದ್ಯಾಭ್ಯಾಸ, ಅಗತ್ಯ ಖರ್ಚುಗಳಿಗೆ ಬಳಸಿಕೊಳ್ಳಲಾಗಿದೆ ಇದು ಸರ್ಕಾರಕ್ಕೆ ಬಹಳ ಖುಷಿಯಾಗಿದೆ ಎಂದು ಹೇಳಿದರು.
ಬಿಜೆಪಿಯು ಸಂಗ್ರಹಿಸಿದ ತೆರಿಗೆಯು ಬೇರೆಯವರ ಜೇಬಿಗೆ ಸೇರುತ್ತದೆ, ಆದರೆ ನಮ್ಮ ಸರ್ಕಾರವು ಸಂಗ್ರಹಿಸಿದ ತೆರಿಗೆ ರಾಜ್ಯದ ಪ್ರತಿಯೊಬ್ಬ ದಲಿತ, ಆದಿವಾಸಿ, ಕಡು ಬಡವರ ಕುಟುಂಬಕ್ಕೆ ಹಣ ಸೇರುವಂತೆ ಮಾಡುತ್ತದೆ ನಮ್ಮ ಉದ್ದೇಶವಾಗಿದೆ ಎಂದು ರಾಹುಲ್ ಗಾಂಧಿ ತಿಳಿಸಿದರು.
ರಾಜ್ಯದಲ್ಲಿ ಲಕ್ಷಾಂತರ ಜನ ಕಂದಾಯ ಜಾಗದಲ್ಲಿ ಇದ್ದಾರೆ, ಅವರ ಬಳಿ ಯಾವುದೇ ದಾಖಲೆಗಳು ಇಲ್ಲ ಎಂಬುವುದು ನನಗೆ ತಿಳಿದಿತ್ತು. ಜೊತೆಗೆ ಆ ಜಾಗದಲ್ಲಿ ಇರುವಂತಹ ಪರಿಶಿಷ್ಟ ಜಾತಿ, ಪಂಗಡ, ಬುಡಕಟ್ಟು ಜನರಿಗೆ ಭೂಮಿ ಮಾಲೀಕತ್ವದ ಹಕ್ಕೆ ಇರಲಿಲ್ಲ ಅಷ್ಟೇ ಅಲ್ಲದೆ ಸರ್ಕಾರದ ಯಾವುದೇ ಸೌಲಭ್ಯ ಸಿಗುತ್ತಿರಲಿಲ್ಲ ಎಂದು ನನಗೆ ಮನವರಿಕೆಯಾಗಿತ್ತು.
ಈ ಬಗ್ಗೆ ಕಾಂಗ್ರೆಸ್ ನ ಹಿರಿಯ ನಾಯಕರ ಗಮನಕ್ಕೆ ತಂದೇ ಜೊತೆಗೆ ಕಂದಾಯ ಜಾಗದಲ್ಲಿದ್ದ ಜನರಿಗೆ ಹಕ್ಕು ಪತ್ರ ನೀಡಿ, ಅವರ ಹೆಸರಿಗೆ ಮಾಡಿಕೊಳ್ಳಬೇಕು ಎಂದು ಹೇಳಿದ್ದೆ ಅದರಂತೆ ಇಂದು ಹಕ್ಕು ಪತ್ರ ನೀಡಲು ಸರ್ಕಾರ ಮುಂದಾಗಿದೆ, ನನ್ನ ಕನಸು ಈಡೇರಿದೆ. ಇದು ಕಾಂಗ್ರೆಸ್ ನ ಆರನೇ ಗ್ಯಾರಂಟಿ ಎಂದು ರಾಹುಲ್ ಗಾಂಧಿ ಹೇಳಿದರು.
ಇಂದು ರಾಜ್ಯದ 2000 ಪ್ರದೇಶವನ್ನು ಕಂದಾಯ ಗ್ರಾಮಗಳಾಗಿ ಘೋಷಣೆ ಮಾಡಿದ್ದೇವೆ. ಜೊತೆ ಅವರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ಕಾಪಿ ಮೂಲಕ ಮಾಡಿಕೊಡಲಾಗುವುದು. ಇದರಿಂದ ಬಡ ಕುಟುಂಬಗಳಿಗೆ ಸಾಕಷ್ಟು ಸಹಾಯಕವಾಗಲಿದೆ ಎಂದರು.
ಇಷ್ಟೆಲ್ಲಾ ಆದರೂ ಕೂಡ ಇನ್ನು 50 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ಸಿಕ್ಕಿಲ್ಲ. ಹೀಗಾಗಿ ಮುಂದಿನ 6 ತಿಂಗಳ ಒಳಗೆ ಉಳಿದ ಅಷ್ಟು ಕುಟುಂಬಗಳಿಗೆ ಹಕ್ಕು ಪತ್ರ ಕೊಡಿಸುವ ಜವಾಬ್ದಾರಿ. ಇದು ಕರ್ನಾಟಕ ಸರ್ಕಾರದ ಆರನೇ ಗ್ಯಾರಂಟಿ, ಇದರಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಲಿದೆ ಎಂದು ರಾಹುಲ್ ಸಲಹೆ ನೀಡಿದರು.
ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮಾತನಾಡಿ, “ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ” ಎಂದು ತಿಳಿಸಿದರು.
“ನಾವಿಂದು ಎರಡು ವರ್ಷಗಳ ಸಂಭ್ರಮಾಚರಣೆ ಮಾಡಲು ಇಲ್ಲಿಗೆ ಬಂದಿಲ್ಲ. ಕರ್ನಾಟಕ ರಾಜ್ಯದ ಜನರ ಋಣ ತೀರಿಸಲು ಸಮರ್ಪಣೆಯ ಸಂಕಲ್ಪ ಕಾರ್ಯಕ್ರಮ ಮಾಡುತ್ತಿದ್ದೇವೆ.
ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ 136 ಕ್ಷೇತ್ರಗಳಲ್ಲಿ ಶಾಸಕರನ್ನು ಆಯ್ಕೆ ಮಾಡಿ ನಮಗೆ ಆಶೀರ್ವಾದ ಮಾಡಿದಿರಿ. ನಿಮ್ಮ ಋಣ ತೀರಿಸಲು ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಯೋಜನೆ ನೀಡುವ ಮೂಲಕ ನಮ್ಮ ಸರ್ಕಾರ ಇತಿಹಾಸ ಬರೆಯುತ್ತಿದೆ” ಎಂದು ತಿಳಿಸಿದರು.
“ಗ್ರಾಮೀಣ ಪ್ರದೇಶದ ಬಡ ಜನರು, ಕಳೆದ ಐವತ್ತು ವರ್ಷಗಳಿಂದ ಪಟ್ಟಾ ಖಾತೆ ಇಲ್ಲದವರಿಗೆ ಇಂದು ಈ ಯೋಜನೆ ಮೂಲಕ ದಾಖಲಾತಿ ನೀಡುತ್ತಿದ್ದೇವೆ. ಇಂತಹ ಐತಿಹಾಸಿಕ ಯೋಜನೆ ನೀಡಿರುವ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಹಾಗೂ ಅವರ ಅಧಿಕಾರಿಗಳ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.
ನಗರ ಪ್ರದೇಶಗಳಲ್ಲಿ ನಾನು, ಭೈರತಿ ಸುರೇಶ್, ರಹೀಂ ಖಾನ್ ಅವರು ಸೇರಿ ಎಲ್ಲಾ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸಿ ಖಾತೆಗಳನ್ನು ಸರಿಪಡಿಸಿ ಜನರಿಗೆ ನೀಡುವ ಏಳನೇ ಗ್ಯಾರಂಟಿಯನ್ನು ಘೋಷಣೆ ಮಾಡುತ್ತಿದ್ದೇವೆ.
ಕಾಂಗ್ರೆಸ್ ಶಕ್ತಿ, ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರು ಅಧಿಕಾರಕ್ಕೆ ಬಂದಂತೆ” ಎಂದು ಹೇಳಿದರು.
“ನಮ್ಮ ಸರ್ಕಾರದ ಎರಡು ವರ್ಷಗಳ ಅವಧಿಯಲ್ಲಿ ಭ್ರಷ್ಟಾಚಾರಕ್ಕೆ ಬೇಡಿ ಹಾಕಿದೆ. ಇಂದಿರಾ ಗಾಂಧಿ ಅವರು ಈ ಜಿಲ್ಲೆಯಲ್ಲಿ ವಿಜಯನಗರ ಸ್ಟೀಲ್ ಆರಂಭಿಸಿದರು. ಸೋನಿಯಾ ಗಾಂಧಿ ಅವರು ಇಲ್ಲಿ ಬಂದು ವಿದ್ಯುತ್ ಶಕ್ತಿಯ ಆರ್ ಟಿಪಿಎಸ್ ಆರಂಭಿಸಿದರು.
ರಾಹುಲ್ ಗಾಂಧಿ ಅವರು ನಮ್ಮ ರಾಜ್ಯದಲ್ಲಿ ಭಾರತ ಜೋಡೋ ಯಾತ್ರೆ ಮಾಡಿದ ಬಹುತೇಕ ಎಲ್ಲಾ ಕಡೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿಗೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 6 ಸಂಸದರನ್ನು ಆಯ್ಕೆ ಮಾಡಿದ್ದೀರಿ. ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ವರ್ಷಕ್ಕೆ 5 ಸಾವಿರ ಕೋಟಿ ನೀಡುತ್ತಿದ್ದೇವೆ” ಎಂದರು.
“ವಿರೋಧ ಪಕ್ಷಗಳು ನಮ್ಮ ವಿರುದ್ಧ ಟೀಕೆಗಳನ್ನು ಮಾಡುತ್ತಿವೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಅದಕ್ಕೆ ನಮ್ಮ ಯೋಜನೆಗಳೇ ಸಾಕ್ಷಿ. ರೈತರ ಬವಣೆ ನೀಗಿಸಲು ರಾಜ್ಯದ ಕೆರೆಗಳನ್ನು ತುಂಬಿಸಲು ಕಾರ್ಯಕ್ರಮ ರೂಪಿಸಲಾಗಿದೆ.
ನವಲಿ ಅಣೆಕಟ್ಟು ಯೋಜನೆ ಮಾಡಲು ಚರ್ಚೆ ಮಾಡುತ್ತಿರುವ ಹೊತ್ತಿನಲ್ಲಿಯೇ. ನಮ್ಮ ಪಾಲಿನ 24 ಟಿಎಂಸಿ ನೀರನ್ನು ಏತ ನೀರಾವರಿ ಮೂಲಕ ಕೆರೆಗಳಿಗೆ ತುಂಬಿಸುವ ಕಾರ್ಯಕ್ರಮ ರೂಪಿಸಲಾಗಿದೆ. ಈ ವಿಚಾರವಾಗಿ ಆಂಧ್ರ ಪ್ರದೇಶ ರಾಜ್ಯದ ಜತೆ ಚರ್ಚೆ ಮಾಡಬೇಕಿದೆ. ಈ ಯೋಜನೆ ಮೂಲಕ ನಿಮ್ಮ ರಕ್ಷಣೆ ಮಾಡಲು ನಾವು ಬದ್ಧ” ಎಂದು ಭರವಸೆ ನೀಡಿದರು.
“ನಮ್ಮ ಸರ್ಕಾರದ ಆಡಳಿತದಲ್ಲಿ ರಾಜ್ಯದಲ್ಲಿ 10 ಲಕ್ಷ ಕೋಟಿ ಬಂಡವಾಳ ಹೂಡಿಕೆಗೆ ಉದ್ಯಮಿಗಳು ಮುಂದಾಗಿದ್ದಾರೆ. ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಮೂಲಕ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಕಲ್ಯಾಣ ಪಥ ಯೋಜನೆ ರೂಪಿಸಲಾಗಿದೆ.
ಇದರ ಜತೆಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿ ನಮ್ಮ ಸಚಿವರು ಹೊಸ ಯೋಜನೆ ತಂದು ಜನರ ಸೇವೆ ಮಾಡುತ್ತಿದ್ದಾರೆ” ಎಂದರು.
“ನಮ್ಮ ಸರ್ಕಾರ ಬಸವಣ್ಣನವರ ಮಾರ್ಗದರ್ಶನದಂತೆ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ನಮ್ಮ ಸರ್ಕಾರದ ಕಾರ್ಯ ಸಾಧನೆಯನ್ನು ವಿರೋಧ ಪಕ್ಷಗಳು ಕಣ್ಣಲ್ಲಿ ನೋಡಲಾಗದೇ, ಟೀಕೆ ಮಾಡುತ್ತಿದ್ದಾರೆ. ಅವರು ಟೀಕೆ ಮಾಡುತ್ತಿರಲಿ, ನಾವು ಜನರ ಬದುಕು ಉಳಿಸುವ ಕೆಲಸ ಮಾಡಿಕೊಂಡು ಹೋಗುತ್ತೇವೆ” ಎಂದು ತಿಳಿಸಿದರು.
111111 ಕುಟುಂಬಗಳಿಗೆ ಒಂದೇ ದಿನ ಹಕ್ಕುಪತ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಭರವಸೆ ನೀಡಿದರು.
ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.
ಸರ್ವ ಜನಾಂಗದ ಶಾಂತಿಯ ತೋಟ
ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದರು.
ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂದರು.
ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ರಾಜ್ಯದ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ. 15 ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ.
ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ ಎಂದು ಟೀಕಿಸಿದರು.
ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ
ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದರು.
ಬಿಜೆಪಿಯ ಕಮಿಷನ್ ಭ್ರಷ್ಟಾಚಾರ ಸಾಭೀತಾಗಿದೆ
ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದರು.
1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯ ರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದರು.
ಚಿನ್ನದ ಬೆಲೆ ಈಗ ಎಷ್ಟಿದೆ?
2014 ರಲ್ಲಿ 10000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ಪರವಾಗಿ ಜನಾಭಿಪ್ರಾಯ ಇದೆ ಎಂದರು.
ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ ಎಂದರು.
ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದರು.
ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷರು, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರು, ಸಂಸದರು, ಶಾಸಕರು ಮತ್ತಿತರರು ಉಪಸ್ಥಿತರಿದ್ದರು.