ದೊಡ್ಡಬಳ್ಳಾಪುರ: ಕನ್ನಡ ಜಾಗೃತಿ ವೇದಿಕೆ ತಾಲೂಕು ಮತ್ತು ಜಿಲ್ಲಾ ಘಟಕದ ವತಿಯಿಂದ ಕನ್ನಡ ಜಾಗೃತಿ ಅಭಿಯಾನ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಕೃತ ಬ್ಯಾಂಕ್‍ಗಳು (Banks) ಹಾಗೂ ಖಾಸಗಿ ಬ್ಯಾಂಕ್‍ಗಳಲ್ಲಿ ಕಡ್ಡಾಯವಾಗಿ ಕನ್ನಡ ಬಲ್ಲ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಯನ್ನು ನೇಮಿಸುವಂತೆ ಬ್ಯಾಂಕಿನ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎಂ.ನಾಗರಾಜು, ಇತ್ತೀಚೆಗೆ ಆನೇಕಲ್ ನ ಎಸ್‍ಬಿಐ ಬ್ಯಾಂಕ್‍ನಲ್ಲಿ ವ್ಯವಸ್ಥಾಫಕರೊಬ್ಬರು ಕನ್ನಡ ಮಾತನಾಡುವುದಿಲ್ಲ ಎಂದು ಉದ್ಘಾಟತನದ ಉತ್ತರ ನೀಡಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ ಸೂಚನೆಯಂತೆ ಸ್ಥಳೀಯ ಭಾಷೆಗಳಲ್ಲಿ ವ್ಯವಹರಿಸಲು ಆದ್ಯತೆ ನೀಡಬೇಕೆಂಬ ನಿಯಮವಿದೆ.
ಸ್ಥಳೀಯ ಕನ್ನಡ ಭಾಷೆಯಲ್ಲಿ ಮಾತನಾಡಿದರೆ ಗ್ರಾಹಕರಿಗೆ ತಮ್ಮ ವ್ಯವಹಾರ ಮಾಡಲು ಹೆಚ್ಚಿನ ಅನುಕೂಲವಾಗುತ್ತದೆ. ಈ ದಿಸೆಯಲ್ಲಿ ಕರ್ನಾಟಕದಲ್ಲಿರುವ ಎಲ್ಲಾ ಬ್ಯಾಂಕುಗಳಲ್ಲಿ ಕನ್ನಡ ಮಾತನಾಡುವ ವ್ಯವಸ್ಥಾಪಕರನ್ನು ಕಡ್ಡಾಯವಾಗಿ ನೇಮಿಸಬೇಕು.
ಬ್ಯಾಂಕುಗಳು ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುವುದರಿಂದ ಪ್ರತಿಯೊಬ್ಬ ಗ್ರಾಹಕರನ್ನು ಗೌರವದಿಂದ ಕಾಣಬೇಕು. ಮತ್ತು ಕನ್ನಡ ಭಾಷೆ ಕಡ್ಡಾಯವಾಗಿ ಮಾತನಾಡುವ ಗ್ರಾಹಕ ಸೇವಾ ಅಕಾರಿಯನ್ನು ನೇಮಿಸಬೇಕು. ಬ್ಯಾಂಕಿನ ಸೇವೆಗಳನ್ನು ಕನ್ನಡದಲ್ಲಿ ನಾಮಫಲಕ ಹಾಕುವ ಮುಖಾಂತರ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಒತ್ತಾಯಿಸಲಾಗುತ್ತಿದೆ ಎಂದರು.
ಕನ್ನಡ ಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ಸಿ.ಶಶಿಧರ್ ಮಾತನಾಡಿ, ಬ್ಯಾಂಕ್‍ಗಳಲ್ಲಿ ಕನ್ನಡಿಗರಿಗೆ ಹೆಚ್ಚಾಗಿ ಉದ್ಯೋಗವನ್ನು ಕಲ್ಪಿಸಬೇಕು ಎಂದು ತಾಲೂಕಿನ ಸ್ಟೇಟ್ ಬ್ಯಾಂಕ್ ಆಫ್‍ಇಂಡಿಯಾ, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಫೆಡರಲ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಓವರ್ಸೀಸ್ ಬ್ಯಾಂಕ್‍ಗಳ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಗಿದೆ. ಅಲ್ಲದೆ ಕನ್ನಡ ಭಾಷೆಗೆ ಧಕ್ಕೆಯಾದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದರು.
ಈ ವೇಳೆ ಕನ್ನಡ ಜಾಗೃತಿ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಅಗ್ನಿ ವೆಂಕಟೇಶ್, ಕಾರ್ಮಿಕ ಘಟಕದ ಅಧ್ಯಕ್ಷರಾದ ಗುರುಪ್ರಸಾದ್, ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್, ಉಪಾಧ್ಯಕ್ಷ ಮಹದೇವ್, ಕಾರ್ಮಿಕ ಘಟಕದ ಜಿಲ್ಲಾ ಉಪಾಧ್ಯಕ್ಷರಾದ ಸುರೇಶ್ ಸಿಂಗಂ, ಸಂಘಟನಾ ಕಾರ್ಯದರ್ಶಿ ಮಂಜುನಾಥ್ ನಿಜಗಲ್, ವಿಶ್ವನಾಥ್, ಸಂಘಟನೆಯ ಸದಸ್ಯರು ಭಾಗವಹಿಸಿದ್ದರು.