ಬೆಂಗಳೂರು; ಐಪಿಎಲ್ ಕಪ್ ಗೆದ್ದ RCB ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಅಭಿಮಾನಿಗಳ ಸಾವಿಗೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ ಡಿಕೆ ಶಿವಕುಮಾರ್ (DL Shivakumar) ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಮುಖಂಡರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಗೆಲುವಿನ ಸಂಭ್ರಮಾಚರಣೆಯಲ್ಲಿ ಲಕ್ಷಾಂತರ ಜನ ಸೇರುತ್ತಾರೆಂಬ ಮಾಹಿತಿ ಇದ್ದರೂ ಒಂದೇ ದಿನದಲ್ಲಿ ಎರಡೆರಡು ಕಾರ್ಯಕ್ರಮ ಆಯೋಜಿಸಿ ಭದ್ರತೆ ನೀಡಲಾಗದೇ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಪ್ರಚಾರದ ಗೀಳಿಗೆ ಅಮಾಯಕರ ಬಲಿ ಪಡೆದಿದೆ.
ಜೂನ್ 4ನೇ ತಾರೀಕು ರಾಜ್ಯಾದ್ಯಂತ, ದೇಶಾದ್ಯಂತ RCB ಸಂಭ್ರಮಾಚರಣೆ ನಡೆಯುತ್ತಿದ್ದರೆ, ಬೆಂಗಳೂರಿನಲ್ಲಿ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನಡುವೆ ಪೈಪೋಟಿ ನಡೆಯುತ್ತಿತ್ತು. RCB ಗೆಲುವಿನ ಸಂಭ್ರಮವನ್ನು ನಮ್ಮ ಸರ್ಕಾರದ ಜನಪ್ರಿಯತೆ ಹೆಚ್ಚಿಸಿಕೊಳ್ಳಬೇಕು ಎಂಬ ಪುಕ್ಕಟ್ಟೆ ಪ್ರಚಾರ ಪಡೆದುಕೊಳ್ಳುವ ಹಠ ಹಾಗೂ ಚಟಕ್ಕೆ ಬಿದ್ದು ಉಪಮುಖ್ಯಮಂತ್ರಿಗಳಂತೂ ಏರ್ಪೋರ್ಟ್ ಗೆ ದಾವಿಸಿ ಕ್ರೀಡಾಪಟುಗಳನ್ನು ಸ್ವಾಗತಿಸಿ ಕ್ರೀಡಾಂಗಣದಲ್ಲಿ ಕಪ್ ಎತ್ತಿ ಹಿಡಿದು ತಾವೇ ಗೆದ್ದವರಂತೆ ಬಿಂಬಿಸಿಕೊಂಡರು.
ಈ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ವರದಿ ಕೊಟ್ಟರೂ ಸಹ ಲೆಕ್ಕಿಸದೇ ಪುಕ್ಕಟ್ಟೆ ಪ್ರಚಾರದ ಗೀಳಿಗೆ ಬಿದ್ದು ಎರಡೂ ಕಡೆ ಕಾರ್ಯಕ್ರಮ ನಡೆಸಿದರ ಪರಿಣಾಮವಾಗಿ 11 ಮುಗ್ಧ ಜೀವಗಳ ಬಲಿ ತೆಗೆದುಕೊಂಡಿದ್ದಾರೆ.
ಈಗಲಾದರೂ ಭಂಡತನ ಬಿಟ್ಟು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದರು.
ಈ ಸಂದರ್ಭದಲ್ಲಿ ವಿಧಾನಸಭಾ ವಿರೋಧ ಪಕ್ಷ ನಾಯಕ ಆರ್.ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, , ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್, ವಿಧಾನಸಭಾ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಸೇರಿದಂತೆ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಇದ್ದರು.