ಬೆಳಗಾವಿ: ತೀವ್ರ ಅತಿಸಾರದಿಂದ ಮಕ್ಕಳ ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವುದನ್ನು ಗುರಿಯಾಗಿಸಿ ಅತಿಸಾರ (Diarrhea) ನಿಲ್ಲಿಸಿ ಅಭಿಯಾನ-2025 ಅನ್ನು ಕಡ್ಡಾಯವಾಗಿ ಆಚರಿಸಿ ಸಾರ್ವಜನಕರಲ್ಲಿ ಜಾಗೃತಿ ಮೂಡಿಸಲು ಕ್ರಮ ವಹಿಸಬೇಕೆಂದು ಜಿಪಂ ಸಿಇಒ ರಾಹುಲ್ ಶಿಂಧೆ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಅವರು ಮಾತನಾಡಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಮಾಡಿ ಕುಂಠಿತ ಪ್ರಗತಿ ಹೊಂದಿರುವ ತಾಲ್ಲೂಕಾ ಆರೋಗ್ಯ ಅಧಿಕಾರಿಗಳಿಗೆ ಪ್ರಗತಿ ಸಾಧಿಸಿ ವರದಿಯನ್ನು ಸಲ್ಲಿಸಲು ತಿಳಿಸಿದರು.
ಜನಸಾಮಾನ್ಯರಲ್ಲಿ ವಿಶೇಷವಾಗಿ ಪೋಷಕರು ಮತ್ತು ಮಕ್ಕಳಲ್ಲಿ ಪರಿಸರ ನೈರ್ಮಲ್ಯ, ಕೈ ತೊಳೆಯುವ ಸರಿಯಾದ ವಿಧಾನ, ವೈಯಕ್ತಿಕ ಶುಚಿತ್ವ ಹಾಗೂ ಅತಿಸಾರದಿಂದ ಪೀಡಿತ ಮಕ್ಕಳಿಗೆ ತುರ್ತು ಆರೈಕೆ ಮತ್ತು ಸೂಕ್ತ ಚಿಕಿತ್ಸೆ ನೀಡುವ ಕುರಿತು ಅರಿವು ಮೂಡಿಸುವುದು ಮತ್ತು ಈ ಮೂಲಕ 0-5 ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಶ್ವಿಯಾಗಿ ಹಮ್ಮಿಕೊಂಡು ಜಿಲ್ಲೆಯಲ್ಲಿ ಯಾವುದೇ ಮಗು ಅತಿಸಾರದಿಂದ ಬಳಲದಂತೆ ನೋಡಿಕೊಳ್ಳಲು ಸಭೆಯಲ್ಲಿ ಎಲ್ಲ ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು.
ಮಳೆಗಾಲ ಪ್ರಾರಂಭವಾಗಿರುವದರಿAದ ಅಲ್ಲಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪನ್ನವಾಗಿ ಕೀಟಜನ್ಯ ಸಾಂಕ್ರಾಮಿಕ ರೋಗಗಳಾದ ಡೆಂಗೀ, ಚಿಕುನ್ ಗುನ್ಯಾ, ಮಲೇರಿಯಾ ಕಾಯಿಲೆಗಳು ಹರಡಬಹುದಾಗಿದ್ದು, ಲಾರ್ವಾ ಸಮೀಕ್ಷೆಯನ್ನು ಕೈಕೊಂಡು ಸೊಳ್ಳೆ ಉತ್ಪನ್ನ ತಾಣಗಳನ್ನು ನಾಶಪಡಿಸಲು ಸಕ್ರೀಯ ಸಮೀಕ್ಷೆ ಕೈಕೊಳ್ಳಬೇಕೆಂದು ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು
ಜಿಲ್ಲೆಯಲ್ಲಿ ವಯಸ್ಕರಿಗೆ ಬಿ.ಸಿಜಿ. ಲಸಿಕೆಯನ್ನು ನೀಡಲಾಗುತ್ತಿದ್ದು, ಈ ಲಸಿಕೆಯನ್ನು 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಹಾಗೂ 18 ವರ್ಷ ಮೇಲ್ಪಟ್ಟ ಕಳೆದ ಐದು ವರ್ಷಗಳಲ್ಲಿ ಕ್ಷಯ ರೋಗದಿಂದ ಬಳಲಿದ ವ್ಯಕ್ತಿಗಳಿಗೆ, ಧೂಮ್ರಪಾನಿಗಳಿಗೆ, ಕ್ಷಯ ರೋಗಿಗಳ ಸಂಪರ್ಕವಿರುವವರಿಗೆ, ಮಧುಮೇಹ ರೋಗಿಗಳಿಗೆ ಹಾಗೂ ವಯಸ್ಸಿಗನುಗುಣವಾಗಿ ಕಡಿಮೆ ತೂಕ ಇರುವವರು ಬಿ.ಸಿಜಿ ಲಸಿಕೆಯನ್ನು ಪಡೆದು ಜಿಲ್ಲೆಯನ್ನು ಕ್ಷಯ ರೋಗ ಮುಕ್ತ ಜಿಲ್ಲೆಯನ್ನು ಮಾಡಲು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ ಚಿಕ್ಕೋಡಿ ಅಪರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್. ಗಡೇದ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ವಿ.ವಿ.ಶಿಂಧೆ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಚಾಂದನಿ ದೆವಡಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಎಸ್ ಎಸ್ ಸಾಯನ್ನವರ, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಗೀತಾ ಕಾಂಬಳೆ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿಶ್ವನಾಥ ಭೋವಿ, ಜಿಲ್ಲಾ ರೋಗವಾಹಕ ಆಶ್ರೀತರೋಗಗಳ ನಿಯಂತ್ರಣಾ ಅಧಿಕಾರಿ ಡಾ.ವಿವೇಕ ಹೊನ್ನಳ್ಳಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸಂಜಯ ದೊಡಮನಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜನಿಯರಿಂಗ್ ಉಪ ವಿಭಾಗದ ಎಚ್ ಅರುಣಕುಮಾರ ಹಾಗೂ ತಾಲೂಕಾ ಆರೋಗ್ಯ ಅಧಿಕಾರಿಗಳು ಮತ್ತು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈಧ್ಯಾಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.