ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆ ಯಾಗುತ್ತಿದ್ದು, ಸೆ.26ರವರೆಗೆ ಮಳೆ (Rain) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರಿ ಮಳೆ ಹಿನ್ನೆಲೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಧಾರಾಕಾರ ಮಳೆಗೆ ಜಮೀನುಗಳಿಗೂ ನೀರು ನುಗ್ಗಿದ್ದು, ಹಳ್ಳಗಳು ಉಕ್ಕಿ ಹರಿಯುತ್ತಿರುವುದರಿಂದ ಬೆಳೆ ನಷ್ಟವಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಲ್ಲದೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಗದಗ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ 18 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಿದೆ.
ವಿಜಯಪುರ, ಕೊಪ್ಪಳ ಮತ್ತು ತುಮಕೂರಿನಲ್ಲಿ ಸಾಧಾರಣ ಮಳೆ ಸುರಿದಿದ್ದು, ಯಾದಗಿರಿ, ಕಲಬುರಗಿ, ಬೆಳಗಾವಿ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಉತ್ತರ ಕನ್ನಡ, ಕೊಡಗು ಮತ್ತು ಮಂಡ್ಯದಲ್ಲಿ ಕೂಡ ಸಾಧಾರಣ ಮಳೆ ಆಗಿದೆ.
ಬೀದರ್, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಧಾರವಾಡ, ವಿಜಯನಗರ, ಶಿವಮೊಗ್ಗ, ಮೈಸೂರು, ಹಾವೇರಿ, ಮತ್ತು ದಾವಣ ಗೆರೆಯ ಕೆಲವೆಡೆ ಸಾಧಾರಣ ಮಳೆ ಆಗಿದೆ. ಒಟ್ಟಾರೆ ರಾಜ್ಯದಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಸುರಿದಿದೆ. (ಸಂಗ್ರಹ ಚಿತ್ರ ಬಳಸಲಾಗಿದೆ)