ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳ ಶಿಕ್ಷಕರಂತೆ (Government school teachers) ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಶ್ರಮಿಸುತ್ತಿರುವ ಖಾಸಗಿ ಶಾಲೆಗಳ ಶಿಕ್ಷಕರನ್ನು (Private school teachers) ಸಮಾನವಾಗಿ ಪರಿಗಣಿಸಬೇಕೆಂದು ವಿಧಾನಪರಿಷತ್ ಸದಸ್ಯ ಪುಟ್ಟಣ್ಣ (Puttanna) ಹೇಳಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದವತಿಯಿಂದ ನಗರದ ಖಾಸಗಿ ಸಮುದಾಯ ಭವನದಲ್ಲಿ ಗುರುವಾರ ಆಯೋಜಿಸಿದ್ದ, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗೆ ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಉತ್ತಮ ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜವನ್ನು ಕಟ್ಟಲು ಸಾಧ್ಯ. ಇಂತಹ ಶಿಕ್ಷಣ ಎಲ್ಲಾಸ್ತರದ ಮಕ್ಕಳಿಗೆ ಸಿಗಬೇಕು. ಈ ನಿಟ್ಟಿನಲ್ಲಿಎಲ್ಲಾ ಶಾಲೆಗಳೂ ಒಗ್ಗೂಡಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾತನಾಡಿ, ಎಲ್ಲಾ ಮಕ್ಕಳ ಉತ್ತೀರ್ಣದ ಮಾನದಂಡವನ್ನು ಏಕರೂಪಗೊಳಿಸುವಲ್ಲಿ ಕೆ.ಎ.ಎಂ.ಎಸ್‌ನ ಪಾತ್ರ ಬಹುಮುಖ್ಯವಾದದ್ದು. ಲಕ್ಷಾಂತರ ಮಕ್ಕಳ ಭವಿಷ್ಯವನ್ನು ಉತ್ತಮಗೊಳಿಸುವಲ್ಲಿ ಈ ಆದೇಶ ಬಹುಮುಖ್ಯ ಪಾತ್ರವಹಿಸುತ್ತದೆ. ಇದನ್ನು ಕಾರ್ಯರೂಪಕ್ಕೆ ತಂದ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಹಾಗೂ ಶಿಕ್ಷಣಸಚಿವ ಮಧು ಬಂಗಾರಪ್ಪ ಅವರನ್ನು ಶ್ಲಾಘಿಸಿದರು.
ಒಕ್ಕೂಟದ ಗೌರವಾಧ್ಯಕ್ಷ ಸುಬ್ರಮಣ್ಯ ಎ ಮಾತನಾಡಿ, ಸರ್ಕಾರಿ ಶಿಕ್ಷಕರಿಗೆ ಸಿಗುವ ಗೌರವ ಸನ್ಮಾನಗಳು, ಖಾಸಗಿ ಶಾಲೆ ಶಿಕ್ಷಕರಿಗೂ ಸಮಾನವಾಗಿ ದೊರೆಯಬೇಕು ಎಂದು ಆಗ್ರಹಿಸಿ, ಒಕ್ಕೂಟವನ್ನು ಕಟ್ಟಿಬೆಳೆಸಿ, ನಡೆದು ಬಂದ ದಾರಿಯನ್ನು ವಿವರಿಸಿದರು.
ಕಾರ್ಯಕ್ರಮದ ಅಂಗವಾಗಿ ಶಿಕ್ಷಕರ ಜೊತೆ ಶಾಲೆಯ ಮಕ್ಕಳ ಸುರಕ್ಷತೆ ಮತ್ತು ಸ್ವಚ್ಛತೆಯಲ್ಲಿ ಮುಖ್ಯ ಪಾತ್ರವಹಿಸುವ ಚಾಲಕ ಮತ್ತು ಸಹಾಯಕ ಸಿಬ್ಬಂದಿಗಳು ಸೇರಿ ಸುಮಾರು 160 ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.
ಈ ವೇಳೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜಿನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ, ಒಕ್ಕೂಟದ ಅಧ್ಯಕ್ಷ ಎಸ್.ಆರ್.ರಮೇಶ್ ಕಾರ್ಯದರ್ಶಿ ಕೆ.ಜಿ.ಶ್ರೀನಿವಾಸಮೂರ್ತಿ, ಉಪಾಧ್ಯಕ್ಷ ಎಂ.ಶರಾವತಿ, ಖಜಾಂಚಿ ಎಂಆರ್.ಪದ್ಮಾವತಿ, ಪದಾಧಿಕಾರಿ ಹೆಚ್.ಎಸ್.ಶೇಷಗಿರಿ, ನಿರ್ದೇಶಕರಾದ ಆರ್.ವಿಜಯಕುಮಾರ್, ಸೀಮಾಯಾಸ್ಮಿನ್, ಅಪೂರ್ವ ಪ್ರಭಾಕರ್, ನಾಗರಾಜು, ರಾಮಚಂದ್ರ ಹೆಚ್., ಹೆಚ್.ಆರ್. ಮಾಧುರಿ, ಒಕ್ಕೂಟದ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ನಗರಸಭೆ ಮಾಜಿ ಅಧ್ಯಕ್ಷ ತ.ನ. ಪ್ರಭುದೇವ್, ದೇವರಾಜ್ ಅರಸ್ ವಿದ್ಯಾಸಂಸ್ಥೆಯ ರಾಕೇಶ್ ಮತ್ತಿತರರಿದ್ದರು.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						