ಬೆಂಗಳೂರು: ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಇನ್ನುಂದೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದರು.
ಜವಾಹರಲಾಲ್ ನೆಹರು ತಾರಾಲಯದಲ್ಲಿ ಆಯೋಜಿಸಿದ್ದ ಗಗನಯಾತ್ರಿ ಶುಭಾಂಶು ಶುಕ್ಲಾ ವಿದ್ಯಾರ್ಥಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ ಮತ್ತು ಕಂಪ್ಯೂಟರ್‌ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲಾ ಮಕ್ಕಳು ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದರು.
900 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಕ 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ಸಿದ್ದತೆ ನಡೆಸಿದ್ದು, ಬಾಲ್ಯದಿಂದಲೇ ಭದ್ರ ಬುನಾದಿ ಹಾಕುವುದು ನನ್ನ ಕರ್ತವ್ಯವಾಗಿದೆ ಎಂದರು.
ಬಳಿಕ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಬಾಹ್ಯಾಕಾಶದಲ್ಲಿ ಕಳೆದ ತಮ್ಮ ವಿಶಿಷ್ಠ ಅನುಭವಗಳನ್ನು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿಗಳು, ಯುವ ವಿಜ್ಞಾನಿಗಳು ಹಾಗೂ ಸಂಶೋಧಕರಿಗೆ ತಿಳಿಸಿದರು. ಜೊತೆಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿದರು.
ಈ ಕಾರ್ಯಕ್ರಮದಿಂದಾಗಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಖಗೋಳ ಶಾಸ್ತ್ರದ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸಲು ನೆರವಾಗಿದೆ. ಜೊತೆಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಸಾಧನೆ ಮತ್ತು ಅನುಭವಗಳು ನಾಡಿನ ಯುವ ವಿಜ್ಞಾನಿಗಳಿಗೆ ಸ್ಫೂರ್ತಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್.ಎಸ್ ಬೋಸರಾಜು ಸೇರಿದಂತೆ ಹಲವು ಗಣ್ಯರು ಹಾಗೂ ಸಂಬಂಧಪಟ್ಟ ಇಲಾಖೆಯ ಉನ್ನತ ಅಧಿಕಾರಿಗಳು ಹಾಜರಿದ್ದರು.