ಬೆಂ.ಗ್ರಾ.ಜಿಲ್ಲೆ: ಡಿಸೆಂಬರ್ 21 ರಿಂದ 24 ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ(Pulse Polio Vaccination Campaign) ನಡೆಯಲಿದ್ದು ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು (A.B. Basavaraju) ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅನುಷ್ಠಾನದ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಐದು ವರ್ಷದೊಳಗಿನ 96,727 ಮಕ್ಕಳು ಇದ್ದಾರೆ. ಡಿಸೆಂಬರ್ 21 ರಿಂದ ಲಸಿಕಾ ಅಭಿಯಾನ ಪ್ರಾರಂಭವಾಗಲಿದೆ. ದಿನಾಂಕ 22 ರಿಂದ 24 ರವೆಗೆ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಪಡೆದಿಲ್ಲದ ಮಕ್ಕಳಿಗೆ ಲಸಿಕೆ ಹಾಕಲಾಗುತ್ತದೆ.
ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಮಕ್ಕಳ ಅಂಗವೈಕಲ್ಯ ತಡೆಯಲು ಪೋಷಕರು ಯಾವುದೇ ಭಯವಿಲ್ಲದೆಯೇ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು. ಲಸಿಕೆಯನ್ನು ಪಡೆಯದ ಮಕ್ಕಳಿಗೆ ಮನೆಮನೆಗೆ ತೆರಳಿ ಲಸಿಕೆ ನೀಡುವಂತೆ, ವಲಸೆ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಅವರಿಗೆ ಕೂಡ ಲಸಿಕೆ ಹಾಕಿಸಬೇಕು. ಜಿಲ್ಲೆಯಲ್ಲಿ ಶೇಕಡ 100% ರಷ್ಟು ಪ್ರಗತಿ ಸಾಧಿಸಿ ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.
ಸಾರ್ವಜನಿಕರು ಹೆಚ್ಚು ಸೇರುವ ಬಸ್ ನಿಲ್ದಾಣ, ಮಾರುಕಟ್ಟೆ, ರೈಲು ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪೋಲಿಯೋ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು ಹಾಗೂ ಟೋಲ್ ಗೇಟ್‌ಗಳಲ್ಲಿ ಮತ್ತು ರಾಷ್ಟೀಯ ಹೆದ್ದಾರಿಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲು ಸೂಚಿಸಿದರು.
ಮುಂಚಿತವಾಗಿ ಬೂತ್‌ಗಳ ನಿಯೋಜನೆ ಸಿಬ್ಬಂದಿ ನಿಯೋಜನೆ ಸೇರಿದಂತೆ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಪೋಲಿಯೋ ಲಸಿಕೆ ಹಾಕಿಸುವಂತೆ ವ್ಯಾಪಕ ಪ್ರಚಾರ ಮಾಡಿ ಎಲ್ಲಾ ಗ್ರಾಮಗಳಿಗೂ ತಲುಪುವಂತೆ ಸ್ವಚ್ಚತಾ ವಾಹಿನಿ ಮತ್ತು ಆಟೋಗಳ ಮೂಲಕ ಪ್ರಚಾರ ಮಾಡಿ ಲಸಿಕೆ ಅಭಿಯಾದ ಕುರಿತು ಮಾಹಿತಿ ನೀಡಿ ಜಿಲ್ಲೆಯ ಯಾವೊಂದು ಮಗುವೂ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಲಕ್ಕ ಕೃಷ್ಣರೆಡ್ಡಿ, ಜಿಲ್ಲಾ ಸರ್ವೇಕ್ಷಣಾ ವೈದ್ಯಾಧಿಕಾರಿಗಳಾದ ಡಾ.ನಾಗರಾಜ್ ಎನ್. ಟಿ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳಾದ ಡಾ.ಸೀಮಾ ರುದ್ರಪ್ಪ ಮಾಬಳೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.