
ನವದೆಹಲಿ: ಕೇಂದ್ರ ಸರ್ಕಾರದ ಪ್ರಸಾದ್ (PRASHAD) 2.0 ಯೋಜನೆ ಅಡಿಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯವನ್ನು (Shri Ghati Subrahmanya Swamy Temple) ಅಭಿವೃದ್ಧಿ ಪಡಿಸುವಂತೆ ಸಂಸದ ಡಾ.ಕೆ. ಸುಧಾಕರ್ (Dr. K. Sudhakar) ಅವರು, ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಅವರಿಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ.
ನಿನ್ನೆ ನವದೆಹಲಿಯಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಅವರನ್ನು ಭೇಟಿಯಾದ ಸಂಸದ ಡಾ.ಕೆ. ಸುಧಾಕರ್ ಅವರು, ದೊಡ್ಡಬಳ್ಳಾಪುರಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಪ್ರತಿ ವರ್ಷ ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ನಾಡಿನ ಪ್ರಮುಖ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಒಂದಾಗಿದ್ದು, ಕ್ಷೇತ್ರದಲ್ಲಿ ಯಾತ್ರಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು ಮತ್ತು ಸ್ವಚ್ಛತೆ ಹೆಚ್ಚಿಸುವ ಉದ್ದೇಶದಿಂದ ಈ ಪ್ರಸ್ತಾವನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಸಂಸದರ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲಿ ಘಾಟಿ ಸುಬ್ರಹ್ಮಣ್ಯ ಸೇರಿದಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎಲ್ಲ ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನು ಮತ್ತು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಬದ್ದವಾಗಿರುವುದಾಗಿ ಡಾ.ಕೆ.ಸುಧಾಕರ್ ಹೇಳಿದ್ದಾರೆ.