ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನಪರ ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಬದಲಾವಣೆ ತಂದಿವೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಎನ್. ವಿಶ್ವನಾಥರೆಡ್ಡಿ (N. Vishwanath Reddy) ತಿಳಿಸಿದ್ದಾರೆ.
ಇಂದು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಹಾಗೂ ಯುವನಿಧಿ ಜನಸಾಮಾನ್ಯರಿಗೆ ನೆಮ್ಮದಿ, ಆರ್ಥಿಕ ಭದ್ರತೆ ಮತ್ತು ಆತ್ಮವಿಶ್ವಾಸ, ಮಹಿಳೆಯರಿಗೆ ಕುಟುಂಬದ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಿದೆ ಎಂದರು.

ರಾಜ್ಯದ 4 ಕೋಟಿಗೂ ಹೆಚ್ಚು ಜನರು ಫಲಾನುಭವಿಗಳಾಗಿದ್ದಾರೆ. ಪ್ರತಿ ಪಕ್ಷಗಳು, ಬಂಡವಾಳಶಾಹಿಗಳು ಗ್ಯಾರಂಟಿಗಳನ್ನು ವಿರೋಧಿಸುವರು, ಟೀಕಿಸುತ್ತಿದ್ದವರೇ ದೇಶದ ಇತರೆ ರಾಜ್ಯಗಳಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡುವ ಮೂಲಕ ನಮ್ಮ ಯೋಜನೆಯನ್ನು ಕಾಪಿ ಮಾಡಿದ್ದಾರೆ. ಆ ಮೂಲಕ ಕಾಂಗ್ರೆಸ್ ಸರ್ಕಾರದ ಯೋಜನೆ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಗೃಹ ಲಕ್ಷ್ಮೀ ಯೋಜನೆಯಡಿ 62,838 ಮಹಿಳೆಯರು ಫಲಾನುಭವಿಗಳಿದ್ದು, ಈವರೆಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ತಿಂಗಳಿಗೆ 2 ಸಾವಿರ ರೂ. ಅಂತೆ 276 ಕೋಟಿ ರೂ. ನೇರವಾಗಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ.

ಗೃಹ ಜ್ಯೋತಿ ಯೋಜನೆಯಡಿ 91,093 ಫಲಾನುಭವಿಗಳಿದ್ದು, 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದ್ದು 3,22,15,000 ಕೋಟಿ ರೂ. ಬಳಸಲಾಗಿದೆ.
ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು, ಬಡವ-ಬಲ್ಲಿದರೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವದಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಇದು ರಾಜ್ಯ ಸರ್ಕಾರದ ಆಶಯವಾಗಿದ್ದು ‘ಕರ್ನಾಟಕ ಮಾದರಿ’ ಆಡಳಿತದ ಮೂಲ ಆಶಯ ಸಾಕಾರಗೊಳ್ಳಲು ಅಧಿಕಾರಿಗಳು ಸಹಕಾರ ನೀಡಬೇಕೆಂದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಇಒ ಮಂಜುನಾಥ್, ಸಿಡಿಪಿಒ ವಿನೋದ್ ಕುಮಾರ್, ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕ ವೆಂಕಟರಾಮ್, ಆಹಾರ ಇಲಾಖೆ ಶಿರಸ್ಥೆಧಾರ್ ಶ್ರೀಧರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಸದಸ್ಯರಾದ ಶಂಕರಪ್ಪ, ತಿಮ್ಮರಾಯ ಗೌಡ, ಶ್ರೀನಿವಾಸ್, ಸುದರ್ಶನ್, ನಂಜಪ್ಪ, ಮಹೇಶ್ವರಿ, ನಾಗರಾಜು, ರಹೀಂಜಾನ್, ನಾಗೇಶ್, ನಟರಾಜು ಭಾಗವಹಿಸಿದ್ದರು.
