ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೀನು ಕೃಷಿ ಕೊಳಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿ ತಾಲ್ಲೂಕಿಗೆ ಒಂದರಂತೆ ಮೀನು ಖಾದ್ಯ ಮಳಿಗೆ ಹಾಗೂ ಅಲಂಕಾರಿಕ ಮೀನು ಉತ್ಪಾದನಾ ಘಟಕಗಳನ್ನು ಮುಂದಿನ ವರ್ಷಗಳಲ್ಲಿ ಸ್ಥಾಪಿಸುವಂತೆ ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ 2020-21ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಕ್ರಿಯಾ ಯೋಜನೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒಂದು 50 ಟನ್ ಸಾಮರ್ಥ್ಯದ ಐಸ್ ಕಾರ್ಖಾನೆ, 50 ಟನ್ ಸಾಮರ್ಥ್ಯದ ಶೀತಲಗೃಹ, 10 ಆರ್.ಎ.ಎಸ್ ಘಟಕಗಳನ್ನು ಹಾಗೂ ಮೀನು ಕೃಷಿ ಕೊಳಗಳನ್ನು ನಿರ್ಮಿಸಲು ತಿಳಿಸಿದರಲ್ಲದೆ, 2020-21ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಕ್ರಿಯಾ ಯೋಜನೆಗೆ 673.52 ಲಕ್ಷ ರೂ.ಗಳಿಗೆ ಜಿಲ್ಲಾಧಿಕಾರಿ ಅವರು ಅನುಮೋದನೆ ನೀಡಿದರು.
ಸಭೆಯಲ್ಲಿ ಸಮಿತಿ ಸದಸ್ಯರಾದ ಕೆ.ವಿ.ಕೆ.ಹಾಡೋನಹಳ್ಳಿ ಮುಖ್ಯಸ್ಥ ಡಾ.ಮಲ್ಲಿಕಾರ್ಜುನ, ಮೀನುಗಾರಿಕೆ ಸಂಶೋಧನೆ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥರಾದ ಶಿವಕುಮಾರ್ ಮಗದ, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಮಧುಸೂದನ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

