ದೊಡ್ಡಬಳ್ಳಾಪುರ: ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿರುವ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರನ್ನು ತಕ್ಷಣ ಬಿಡುಗಡೆ ಮಾಡಬೇಕು, ಇಲ್ಲವೆ ನಮ್ಮನ್ನು ಬಂಧಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ನಗರದ ಪೊಲೀಸ್ ಠಾಣೆ ಮುಂದೆ ಬುಧವಾರ ರಾತ್ರಿ ಪ್ರತಿಭಟನೆ ನಡೆಸಿದರು.
ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿಗಳ ವಿರುದ್ದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಕಾರ್ಯಕರ್ತರನ್ನು ಪೊಲೀಸರು ಅನಗತ್ಯವಾಗಿ ಬಂಧಿಸಿದ್ದಾರೆ. ಪ್ರಜಾಪ್ರಭುತ್ವ ಆಡಳಿತದಲ್ಲಿ ಪ್ರತಿಭಟಿಸುವ ಹಕ್ಕನ್ನು ಸಹ ಬಿಜೆಪಿ ಸರ್ಕಾರ ಕಸಿದುಕೊಳ್ಳುತ್ತಿದೆ. ರೈತ ವಿರೋಧಿ ಕಾಯ್ದೆಗಳನ್ನು ತರುವ ಮೂಲಕ ಕೃಷಿಯಿಂದ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರವನ್ನು ಸಹಿಸುವುದಿಲ್ಲ ಎಂದು ಪ್ರತಿಭಟನೆ ನಿರತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಅಧ್ಯಕ್ಷ ಪ್ರಸನ್ನ, ಮುಖಂಡರಾದ ಸತೀಶ್, ವಸಂತ್ ಕುಮಾರ್ ಇದ್ದರು.
ಪ್ರತಿಭಟನ ರೈತ ಮುಖಂಡರನ್ನು ಪೊಲೀಸರು ಬಂಧಿಸದೆ ಮನವೊಲಿಸಿ ಕಳುಹಿಸಿದರು.

