ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್-19 ವೈರಾಣು ಸೋಂಕು ಹೆಚ್ಚುತ್ತಿರುವ ಹಿನ್ನೆಲೆ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ಕೊರೋನಾ ಸೋಂಕು ನಿಯಂತ್ರಣಕ್ಕೆ ಮುಂದಾಗಬೇಕು ಎಂದು ವಿವಿಧ ಇಲಾಖಾಧಿಕಾರಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತ ಅವರು ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿಂದು ನಡೆದ “ಕರೊನಾ ವೈರಸ್/ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ತೆಗೆದುಕೊಂಡ ಕ್ರಮಗಳ ಬಗ್ಗೆ ಹಾಗೂ ಇತರೆ ವಿಷಯಗಳ ಕುರಿತ ಪರಿಶೀಲನಾ ಸಭೆಯ” ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೋಂಕಿತರ ಪ್ರಥಮ ಸಂಪರ್ಕ ಹಾಗೂ ದ್ವಿತೀಯ ಸಂಪರ್ಕ ದತ್ತಾಂಶ ಸಂಗ್ರಹದ ಮಾಹಿತಿಯನ್ನು ಆಯಾ ದಿನದಂದೇ ಸಂಬಂಧಿಸಿದ ಆ್ಯಪ್‌ಗಳಿಗೆ ಅಪ್ಲೋಡ್ ಮಾಡಬೇಕು ಎಂದರಲ್ಲದೆ, ಕ್ವಾರೈಂಟೈನ್ ವಾಚ್‌ಗಾರ್ಡ್ ಹಾಗೂ ಹೋಮ್ ಐಸೋಲೇಷನ್‌ಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲಿ ದಿನನಿತ್ಯ ಪರಿಶೀಲನೆ ಮಾಡಲು ನೋಡಲ್ ಅಧಿಕಾರಿಯನ್ನು ನೇಮಕ ಮಾಡಲು ಜಿಲ್ಲಾಧಿಕಾರಿ ಅವರಿಗೆ ಸೂಚಿಸಿದರು.
ಜಿಲ್ಲೆಯ ನಾಲ್ಕು ತಾಲ್ಲೂಕಿನ, ತಾಲ್ಲೂಕು ಆರೋಗ್ಯಾಧಿಕಾರಿಗಳೊಡನೆ ಚರ್ಚಿಸಿ, ಸೋಂಕಿತರ ಪ್ರಮಾಣ, ಗುಣಮುಖವಾಗುತ್ತಿರುವ ಪ್ರಮಾಣ ಹಾಗೂ ಸೋಂಕಿನಿಂದ ಮರಣ ಹೊಂದುತ್ತಿರುವ ಮಾಹಿತಿಯನ್ನು ಪಡೆದು, ನಿಖರ ಮಾಹಿತಿಯೊಂದಿಗೆ ಹೆಚ್ಚು ಕಾರ್ಯ ಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಮಾತನಾಡಿ ಕೊರೋನ ಸೋಂಕಿತರಿಗಾಗಿಯೇ ಜಿಲ್ಲೆಯ ದೇವನಹಳ್ಳಿಯಲ್ಲಿ ಡೆಡಿಕೇಟೆಟ್ ಕೋವಿಡ್ ಅಸ್ಪತ್ರೆಯನ್ನು ತೆರೆಯಲಾಗಿದ್ದು, 300 ಹಾಸಿಗೆಗಳು ಲಭ್ಯವಿದೆ ಎಂದರಲ್ಲದೆ, ಜಿಲ್ಲೆಯಲ್ಲಿ ಯಾವುದೇ ಬೆಡ್‌ನ ಕೊರತೆಯಿಲ್ಲ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಇದುವರೆಗೂ 9088 ಕರೊನಾ ವೈರಾಣು ಸೋಂಕಿತರು ಕಂಡುಬಂದಿದ್ದಾರೆ. ಅವರಲ್ಲಿ 7621 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಪ್ರಸ್ತುತ 1392 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ, ಜಿಲ್ಲೆಯಲ್ಲಿ ಇದುವರೆಗೂ 91 ಮಂದಿ ಕರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ನಾಲ್ಕು ತಾಲ್ಲೂಕುಗಳ ತಹಶೀಲ್ದಾರ್‌ಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

