ಬೆಂಗಳೂರು: ಭಾರತೀಯ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ಅವರು ಭಾನುವಾರ ರಾತ್ರಿ 10.30ಕ್ಕೆ ನಿಧನರಾದರು.ಅವರಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ, ಅವರು ಮನೆಯಲ್ಲಿಯೇ ಹೃದಯಾಘಾತದಿಂದ ನಿಧನರಾದರು.
ಪುತ್ರ ಮತ್ತು ಪುತ್ರಿಯನ್ನು ಅವರು ಅಗಲಿದ್ದಾರೆ. ಸೋಮವಾರ (ಅ.12) ಅವರ ಅಂತ್ಯಕ್ರಿಯೆಯನ್ನು ಹೆಬ್ಬಾಳದ ಸ್ಮಶಾನದಲ್ಲಿ ನೆರವೇರಿಸಲಾಗುತ್ತದೆ.
ಕರೊನಾ ವೈರಸ್ ಇರುವ ಹಿನ್ನೆಲೆಯಲ್ಲಿ ಆಪ್ತರಿಗಷ್ಟೇ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಕುಟುಂಬದವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಹಿರಿಯ ಸಂಗೀತ ನಿರ್ದೇಶಕ ರಾಜನ್ ಅವರ ನಿಧನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.ಹೆಸರಾಂತ ಹಿರಿಯ ಸಂಗೀತ ನಿರ್ದೇಶಕ ರಾಜನ್ ಅವರು ನಿಧನರಾದ ಸುದ್ದಿ ತೀವ್ರ ಶೋಕವನ್ನುಂಟು ಮಾಡಿದೆ. ತಮ್ಮ ಸಹೋದರ ನಾಗೇಂದ್ರಪ್ಪ ಅವರೊಂದಿಗೆ ‘ರಾಜನ್-ನಾಗೇಂದ್ರ’ ಹೆಸರಿನಲ್ಲಿ ಜಂಟಿಯಾಗಿ ಅನೇಕ ಜನಪ್ರಿಯ, ಯಶಸ್ವಿ ಕನ್ನಡ ಚಿತ್ರಗಳಿಗೆ ಸಂಗೀತ ನೀಡಿದ್ದ ರಾಜನ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಅನಾಥವಾಗಿದೆ ಎಂದು ರಾಜನ್ ನಿಧನಕ್ಕೆ ಟ್ವೀಟರ್ ನಲ್ಲಿ ಸಿಎಂ ಬಿಎಸ್ ವೈ ಸಂತಾಪ ಸೂಚಿಸಿದ್ದಾರೆ.

