ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ ಅಧ್ಯಕ್ಷತೆಯಲ್ಲಿ ಕೋವಿಡ್ 19 ಪರೀಕ್ಷೆ ನಿಮಿತ್ತ ಅಂತರ್ ಇಲಾಖಾ ಸಮನ್ವಯ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಜನರಿಗೆ ಕೋವಿಡ್ 19 ಪರೀಕ್ಷೆ ಕಡ್ಡಾಯವಾಗಿ ಮಾಡಬೇಕು. ಜನರಿಗೆ ಕರೊನಾ ಸೋಂಕಿನ ಬಗ್ಗೆ ಜಾಗೃತಿ ಮಾಡಿಸಲು ಮಾಹಿತಿ ಶಿಕ್ಷಣ ಮತ್ತು ಸಂವಹನ IEC ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ಆರೋಗ್ಯ ಇಲಾಖೆ ಮತ್ತು ತಾಲ್ಲೂಕು ಪಂಚಾಯತ್ ಇಲಾಖೆ ಸೇರಿ ಪರಸ್ಪರ ಸಹಕಾರ ಮನೋಭಾವದಿಂದ ಕರೊನಾ ಸೋಂಕನ್ನು ನಿಯಂತ್ರಿಸಲು ಪಣತೊಡಬೇಕಿದೆ ಎಂದರು. ಇದೇ ವೇಳೆ ಕರೊನಾ ಸೋಂಕಿನ ತಪಾಸಣೆ ಮತ್ತು iec ಕಾರ್ಯಕ್ರಮಗಳ ಕುರಿತು ವೈದ್ಯರು ಹಾಗೂ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಭೆಯಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮುರುಡಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ ಮತ್ತಿತರಿದ್ದರು.

