ದೊಡ್ಡಬಳ್ಳಾಪುರ: ಮಕ್ಕಳ ಹಕ್ಕುಗಳ ರಕ್ಷಣೆಗಾಗಿ 2020ರ ನವಂಬರ್ 14 ರಿಂದ 2021ರ ಜನವರಿ 24 ರವರೆಗೆ 10 ವಾರಗಳ ಕಾಲ “ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ” ಹಮ್ಮಿಕೊಳ್ಳಬೇಕೆಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಮತ್ತು ಜಲ ಜೀವನ್ ಮಿಷನ್ ಯೋಜನೆಗಳ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕುಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಪೌಷ್ಟಿಕ ಆಹಾರ, ಕ್ರೀಡಾ ಕೂಟ, ಚಿತ್ರಕಲೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಭಿಯಾನ ಯಶಸ್ಸುಗೊಳಿಸಲು ತಿಳಿಸಿದರಲ್ಲದೆ, ಜಲ ಜೀವನ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಅಕ್ಟೊಬರ್ 02 ರಿಂದ 100 ದಿನಗಳ(ಜನವರಿ 2021 ಮೊದಲವಾರದ) ಒಳಗಾಗಿ ಪ್ರತಿ ಗ್ರಾಮದ ಅಂಗನವಾಡಿ ಕೇಂದ್ರ, ಸರ್ಕಾರಿ ಶಾಲೆಗಳು ಹಾಗೂ ವಸತಿ ಮತ್ತು ಆಶ್ರಮ ಶಾಲೆಗಳಿಗೆ ಕೊಳವೆ ನೀರು ಸಂಪರ್ಕ ಕಲ್ಪಿಸಲು ಮತ್ತು ಬಾಲ ಸ್ನೇಹಿ ಶೌಚಾಲಯಗಳ ವಿಶೇಷ ಆಂದೋಲನ ಹಮ್ಮಿಕೊಳ್ಳಲು ತಿಳಿಸಿದರು.
ಎಲ್ಲಾ ಅಂಗನವಾಡಿ ಕೇಂದ್ರ, ಸರ್ಕಾರಿ ಶಾಲೆಗಳು ಹಾಗೂ ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಶುದ್ಧ ಕುಡಿಯುವ ನೀರು, ಅಡುಗೆ ತಯಾರಿಸಲು, ಕೈ ತೊಳೆಯಲು ಹಾಗೂ ಶೌಚಾಲಯ ಬಳಕೆಗಾಗಿ ಅಗತ್ಯ ನೀರು ದೊರಕುವಂತೆ ಯೋಜನೆ ರೂಪಿಸಿ, ಅದರಂತೆ ನಿಗದಿತ ಅವಧಿಯೊಳಗೆ ಗುರಿ ಸಾಧನೆ ಮಾಡುವಂತೆ ಸೂಚಿಸಿದರು.
ಪ್ರತಿ ಗ್ರಾಮ ಪಂಚಾಯತಿ ಸೂಚನಾ ಫಲಕದಲ್ಲಿ ಪರಿಹಾರ ಸಹಾಯವಾಣಿ ಸಂಖ್ಯೆ: 9480985555 ಅನ್ನು ಪ್ರದರ್ಶಿಸಲು ತಿಳಿಸಿದರಲ್ಲದೆ, ನಿರ್ಮಾಣ ಹಂತದಲ್ಲಿರುವ ಸ್ವಚ್ಛ ಸಂಕೀರ್ಣ ಘಟಕಗಳನ್ನು ಡಿಸೆಂಬರ್ ತಿಂಗಳೊಳಗೆ ಪೂರ್ಣ ಗೊಳಿಸಲು ಸೂಚಿಸಿದರು.
ನರೇಗಾ ಯೋಜನೆಯಡಿಯಲ್ಲಿ ಮಳೆ ನೀರು ಕೊಯ್ಲು, ಕೆರೆ, ಕುಂಟೆ, ಸೊಕ್ ಪಿಟ್, ಕಿಚನ್ ಗಾರ್ಡನ್, ಸಸಿ ನೆಡುವ ಕಾರ್ಯಕ್ರಮಗಳನ್ನು ಹಾಗೂ ಸ್ವಚ್ಛ ಸಂಕೀರ್ಣ ಘಟಕಗಳಿಗೆ ಕಾಂಪೌಂಡ್ ನಿರ್ಮಿಸಲು ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಅಭಿಯಂತರರು, ವಿವಿಧ ಇಲಾಖೆಗಳ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಎಸ್.ಬಿ.ಎಂ-ಜಿ(SBM-G) ಸಮಾಲೋಚಕರು ಉಪಸ್ಥಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

