ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯನ್ನು ರಾಜ್ಯ ಸರ್ಕಾರ ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೇರಿಸುವ ನಿರ್ಧಾರ ಸ್ವಾಗತಾರ್ಹವಾಗಿದೆ. ಆದರೆ ಈಗಾಗಲೇ ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ನಿಗದಿಯಾಗಿರುವುದರಿಂದ ಚುನಾವಣೆ ಪ್ರಕ್ರಿಯೆಯನ್ನು ತಡೆ ಹಿಡಿದು, ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ನಂತರವೇ ಚುನಾವಣೆ ನಡೆಸಬೇಕಿದೆ ಎಂದು ವಿವಿಧ ಪಕ್ಷಗಳ ಮುಖಂಡರು ಒತ್ತಾಯಿಸಿದ್ದಾರೆ.
ಈ ಕುರಿತು ಸರ್ವ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಮುಖಂಡರು. ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಇಡೀ ರಾಜ್ಯದಲ್ಲಿಯೇ ವಿಶಿಷ್ಟವಾಗಿ ಗುರುತಿಸಿಕೊಂಡಿರುವ ಗ್ರಾಮ ಪಂಚಾಯಿತಿಯಾಗಿದ್ದು, ಹಲವಾರು ಪ್ರಶಸ್ತಿಗಳು ಸಹ ಸಂದಿವೆ. ದಿನೇ ದಿನೇ ಅಭಿವೃದ್ದಿಯತ್ತ ಸಾಗುತ್ತಿರುವ ಈ ಪಂಚಾಯಿತಿಗೆ 2011ರಿಂದ ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಒತ್ತಾಯಿಸಲಾಗುತ್ತಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಅದು ಮುಂದೂಡುತ್ತಾ ಬರುತ್ತಿತ್ತು. ಪಂಚಾಯತಿಯ 2 ಗ್ರಾಮಗಳ ಕುರಿತಾಗಿ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಪ್ರಸ್ತುತ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲು ಸಂಪುಟ ಸಭೆ ತೀರ್ಮಾನಿಸಿದ್ದು, ಆಕ್ಷೇಪಣೆ ಗಳಿದ್ದರೆ ಸಲ್ಲಿಸಲು ಸರ್ಕಾರದ ಅಧೀನ ಕಾರ್ಯದರ್ಶಿ ಎ.ವಿಜಯಕುಮಾರ್ ವಿಶೇಷ ರಾಜ್ಯ ಪತ್ರದಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ. ಈ ಕ್ರಮಕ್ಕಾಗಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ. ಆದರೆ ಇಂತಹ ಸಂದರ್ಭದಲ್ಲಿ ಚುನಾವಣೆ ನಡೆಸುವುದು ಸೂಕ್ತವಾಗಿಲ್ಲದ ಕಾರಣ, ತಡವಾಗಿಯಾದರೂ ಸರಿ, ಪಟ್ಟಣ ಪಂಚಾಯಿತಿಯನ್ನಾಗಿ ಪರಿವರ್ತಿತವಾದ ನಂತರ ಚುನಾವಣೆ ನಡೆಸಬೇಕಿದೆ. ಈ ಕುರಿತು ಚುನಾವಣಾ ಆಯೋಗಕ್ಕೂ ಮನವಿ ಸಲ್ಲಿಸಲಾಗಿದೆ.
1993ರಲ್ಲಿ ಗ್ರಾಮ ಪಂಚಾಯತಿಯಾಗಿ ರೂಪುಗೊಂಡ ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಈಗ 47 ಮಂದಿ ಸದಸ್ಯರಿದ್ದು, ಇಡೀ ತಾಲೂಕಿನಲ್ಲಿಯೇ ದೊಡ್ಡ ಗ್ರಾಮ ಪಂಚಾಯಿತಿಯಾಗಿದೆ. ಪಕ್ಷಾತೀತವಾಗಿ ಅಭಿವೃದ್ದಿ ಕಾರ್ಯಗಳನ್ನು ಮಾಡುವುದರಲ್ಲಿ ಪಂಚಾಯತಿ ಮಾದರಿಯಾಗಿದ್ದು, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ಪಂಚಾಯತಿಯನ್ನು ಪುರಸಭೆಯಾಗಿ ಮಾಡುವಂತೆ ನಾವು ಮನವಿ ಸಲ್ಲಿಸಿದ್ದೆವು. ಆದರೆ ಕೆಲವು ಮಾನದಂಡಗಳಿಂದ ಇದು ಸಾಧ್ಯವಾಗಿಲ್ಲ. ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುತ್ತಿರುವುದು ಸಂತಸದ ಸಂಗತಿ. ಸರ್ಕಾರ ಕೆಐಡಿಬಿಎ ಗೆ ತೆರಿಗೆ ಸಂಗ್ರಹಕ್ಕೆ ಅವಕಾಶ ನೀಡದೇ ಗ್ರಾಮ ಪಂಚಾಯತಿಗೆ ತೆರಿಗೆ ಸಂಗ್ರಹಣ ಮಾಡಲು ಅವಕಾಶ ಮಾಡಿಕೊಡಬೇಕಿದೆ.
ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದರೆ ಪಂಚಾಯಿತಿ ಅಭಿವೃದ್ದಿಗೆ ಪೂರಕವಾಗಲಿದೆ. ವಿವಿಧ ಮೂಲ ಸೌಕರ್ಯಗಳಿಗೆ ಹೆಚ್ಚಿನ ಅನುದಾನ ಲಭಿಸುತ್ತದೆ. ಮುಂದಿನ ದಿನಗಳಲ್ಲಿ ಪುರಸಭೆಯಾಗುವ ಅವಕಾಶಗಳಿವೆ ಎಂದಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ವಿವಿಧ ಪಕ್ಷಗಳ ಮುಖಂಡರು, ಮಾಜಿ ಅಧ್ಯಕರು, ಸದಸ್ಯರು ಹಾಜರಿದ್ದರು.
ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಫಾಲೋ ಮಾಡಿ.

