ಬೆಂಗಳೂರು: ಗ್ರಾಮ ಪಂಚಾಯಿತಿಗಳಿಗೆ 2020ರ ಡಿ.22ರಂದು ಹಾಗೂ ಡಿ.27ರಂದು ನಡೆಯುವ ಸಾರ್ವತ್ರಿಕ ಚುನಾವಣೆಯ ಸಂಬಂಧ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯಾವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ Establishment ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ 2020ರ ಡಿಸೆಂಬರ್ 22 ಮಂಗಳವಾರದಂದು ವೇತನ ಸಹಿತ ರಜೆಯನ್ನು ಘೋಷಿಸಲಾಗಿದೆ.
ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ ಹಾಗೂ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು.
ಸರ್ಕಾರದ ಅಧಿಸೂಚನೆಯಂತೆ ಅರ್ಹ ಮತದಾರರ ನೌಕರರಿಗೆ ವೇತನ ಸಹಿತ ರಜೆಯನ್ನು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಸೂಚಿಸಿದ್ದಾರೆ.
ಡಿ.22 ಹಾಗೂ 27 ರಂದು ಸಂತೆ, ಜಾತ್ರೆ ನಿಷೇಧ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2020ರ ಪ್ರಯುಕ್ತ ಮೊದಲನೇ ಹಂತ ಚುನಾವಣೆ 2020ರ ಡಿಸೆಂಬರ್ 22 ಮತ್ತು ಎರಡನೇ ಹಂತ ಚುನಾವಣೆ ಡಿಸೆಂಬರ್ 27 ಮತದಾನ ದಿನದಂದು ಸಂತೆ ಹಾಗೂ ಜಾತ್ರೆಗಳನ್ನು ನಿಷೇಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶಿಸಿದ್ದಾರೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

