ಬೆಂಗಳೂರು: ಕರೊನಾ ವೈರಸ್ (ಕೋವಿಡ್-19) ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ 2020ರ ಡಿ.20 ರಿಂದ 2021ರ ಜ.2 ರವರೆಗೆ ಕ್ರಿಸ್‍ಮಸ್ ಹಾಗೂ ಹೊಸ ವರ್ಷ ಆಚರಣೆ ಸಂಬಂಧ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 144(1) ರಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶಿಸಿದ್ದಾರೆ.
ಕ್ರಿಸ್‍ಮಸ್ ಹಾಗೂ ಹೊಸ ವರ್ಷ ಆಚರಣೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಗೆ ಅನ್ವಯ ಕ್ರೈಸ್ತ ಧರ್ಮದ ಚರ್ಚ್‍ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮೇಲ್ವಿಚಾರಕರು ಅಥವಾ ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸತಕ್ಕದ್ದು. ಹಬ್ಬದ ಆಚರಣೆಯ ಸಂದರ್ಭದಲ್ಲಿ ಕೋವಿಡ್-19 ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಿದೆ.
2020ರ ಡಿ.30 ರಿಂದ 2021ರ ಜ.02 ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಸ್ಥಳ ಅಥವಾ ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ವಿಶೇಷ ಡಿಜೆ-ಡಾನ್ಸ್ ಕಾರ್ಯಕ್ರಮಗಳನ್ನು, ವಿಶೇಷ ಪಾರ್ಟಿ, ಇತ್ಯಾದಿ ನಿಷೇಧಿಸಿದೆ ಆದರೆ, ಕ್ಲಬ್, ಪಬ್, ರೆಸ್ಟೋರೆಂಟ್‍ಗಳನ್ನು ಪ್ರತಿನಿತ್ಯ ತೆರೆದಿದ್ದು, ನಡೆಸಲು ನಿರ್ಬಂಧವಿರುವುದಿಲ್ಲ.
ಹೊಸ ವರ್ಷಾಚರಣೆ ಸಂಬಂಧದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮುಖ್ಯ ರಸ್ತೆಗಳಲ್ಲಿ ಮತ್ತು ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸೇರುವಿಕೆಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಿದೆ. ಆದರೆ, ಈ ಸ್ಥಳಗಳಲ್ಲಿ ಪ್ರತಿನಿತ್ಯದ ಸಾಮಾನ್ಯ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ನಿರ್ಬಂಧವಿರುವುದಿಲ್ಲ.
ಸರ್ಕಾರದ ಆದೇಶ ಸಂಖ್ಯೆ: ಕಂಇ 158 ಟಿಎನ್‍ಆರ್ 2020, ದಿನಾಂಕ: 27.11.2020ರಲ್ಲಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ಅದರಂತೆ ಬಹು ಮುಖ್ಯವಾಗಿ 65 ವರ್ಷದ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರತಕ್ಕದ್ದು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ಹೋಟೆಲ್‍ಗಳು, ಮಾಲ್‍ಗಳು, ಪಬ್, ರೆಸ್ಟೋರೆಂಟ್‍ಗಳು ಹಾಗೂ ಅಂತಹ ಪ್ರದೇಶಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಇರಿಸತಕ್ಕದ್ದು.
ಹೋಟೆಲ್‍ಗಳು, ಮಾಲ್‍ಗಳು, ಪಬ್, ರೆಸ್ಟೋರೆಂಟ್‍ಗಳು ಹಾಗೂ ಅಂತಹ ಸ್ಥಳ ಅಥವಾ ಪ್ರದೇಶಗಳಲ್ಲಿ ಅದರ ಮಾಲೀಕರು ಕಡ್ಡಾಯವಾಗಿ ಸರ್ಕಾರದ ಆದೇಶದಂತೆ ಕೋವಿಡ್-19ರ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರದಿಂದ ಜನರು ಸೇರಲು ಜಾಗ್ರತೆ ವಹಿಸುವುದು. ಅಗತ್ಯವಿದ್ದಲ್ಲಿ ಜನರನ್ನು ಸರದಿಯಲ್ಲಿ ಪ್ರವೇಶಿಸಲು ಅಥವಾ ಆನ್‍ಲೈನ್ ಮುಖಾಂತರ/ಟೋಕನ್ ಪದ್ದತಿಯಲ್ಲಿ ಸ್ಥಳ ಕಾಯ್ದಿರಿಸಲು(Pre Booking) ವ್ಯವಸ್ಥೆಯನ್ನು ಕಲ್ಪಿಸುವುದು.
ಪ್ರಾಂಗಣಗಳಲ್ಲಿ ಉಪಹಾರ ಸ್ಥಳಗಳಲ್ಲಿ ವ್ಯವಸ್ಥಿತ ಕಟ್ಟಡ ಸಮುಚ್ಚಯಗಳಲ್ಲಿ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ವ್ಯವಸ್ಥೆ ಕಲ್ಪಿಸತಕ್ಕದ್ದು. ಸರ್ಕಾರದ ಮಾರ್ಗ ಸೂಚಿಯಂತೆ ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚತಕ್ಕದ್ದು.
ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ ಅಥವಾ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

