ಬೆಂಗಳೂರು: ರಾಜ್ಯ ಸರ್ಕಾರದ ಎಡಬಿಡಂಗಿ ನಿಲುವುಗಳಿಂದಾಗಿ ವಿದ್ಯಾರ್ಥಿಗಳು, ಪೋಷಕರು ಮತ್ತು ಖಾಸಗಿ ಶಾಲೆಗಳ ಮಾಲೀಕರು ಎಲ್ಲರೂ ಬೀದಿಗಿಳಿದಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಕ್ಷಣ ಸ್ಪಷ್ಟನಿರ್ಧಾರ ಕೈಗೊಂಡು ಈ ಬಿಕ್ಕಟ್ಟನ್ನು ಬಗೆಹರಿಸಿ ವಿದ್ಯಾರ್ಥಿಗಳನ್ನು ರಕ್ಷಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ಒತ್ತಾಯಿಸಿದ್ದಾರೆ.
ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿನ ಈಗಿನ ಬಿಕ್ಕಟ್ಟಿಗೆ ಮುಖ್ಯಮಂತ್ರಿಗಳು ಮತ್ತು ಶಿಕ್ಷಣಸಚಿವರೇ ನೇರ ಹೊಣೆಗಾರರು. ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ಜಗಳ ತಂದು ಹಾಕಿ ಇವರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.
ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲ.ತರಗತಿಗಳಿಲ್ಲದೆ ಇದ್ದರೂ ಪೋಷಕರಿಂದ ಪೂರ್ಣಶುಲ್ಕ ವಸೂಲಿ ಮಾಡಲಾಗುತ್ತಿದೆ. ಇದಕ್ಕಾಗಿ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿ ಪೋಷಕರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ಆದರೂ ಸರ್ಕಾರ ಕಣ್ಣುಮುಚ್ಚಿಕೊಂಡು ಕೂತಿದೆ.
ತರಗತಿಗಳು ನಡೆಯದೆ ಇದ್ದರೂ ಬೋದನಾ ಶುಲ್ಕದ ಜೊತೆಯಲ್ಲಿ ಪ್ರಯೋಗಶಾಲೆ, ಲೈಬ್ರೆರಿ ಮತ್ತಿತರ ಪಠ್ಯೇತರ ಶುಲ್ಕ ವಸೂಲಿಗೆ ಹೊರಟಿರುವ ಖಾಸಗಿ ಶಾಲೆಗಳು ಸರ್ಕಾರದ ಪೊಳ್ಳುಬೆದರಿಕೆಗೆ ಜಗ್ಗುತ್ತಿಲ್ಲ. ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ಶಾಮೀಲಾಗಿದೆ.
ಶಾಲೆ ಪುನರಾರಂಭದ ಬಗ್ಗೆ ಸರಣಿ ಸಭೆಗಳು, ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳ ತರಹೇವಾರಿ ಹೇಳಿಕೆಗಳು ಪೋಷಕರನ್ನು ಗೊಂದಲಕ್ಕೆ ನೂಕಿವೆ. ತಕ್ಷಣ ಸಚಿವರು ಖಾಸಗಿ ಶಾಲೆಗಳು ಮತ್ತು ಪೋಷಕರ ಸಭೆ ಕರೆದು ಪಾರದರ್ಶಕವಾಗಿ ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

